ಕರಾವಳಿ

ವಿಧಾನಪರಿಷತ್ ಚುನಾವಣೆ ಹಿನ್ನೆಲೆ: ಇಂದು ಸಂಜೆಯಿಂದ ನಾಳೆ ಸಂಜೆಯವರೆಗೆ ದ.ಕ.ಜಿಲ್ಲೆಯಲ್ಲಿ ನಿಷೇಧಾಜ್ಞೆ

Pinterest LinkedIn Tumblr

ಮಂಗಳೂರು ಜೂನ್ 7: ವಿಧಾನಪರಿಷತ್ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯ ಒಟ್ಟು 37 (ಪದವೀಧರ ಕ್ಷೇತ್ರ-23 ಮತ್ತು ಶಿಕ್ಷಕರ ಕ್ಷೇತ್ರ-17) ಮತದಾನ ಕೇಂದ್ರಗಳ 500 ಮೀಟರ್ ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಜೂನ್ 7 ರ ಸಂಜೆ 5 ರಿಂದ ಜೂನ್ 8 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಿತ 500 ಮೀಟರ್ ವ್ಯಾಪ್ತಿಯಲ್ಲಿ ಮತದಾರರನ್ನು ಹೊರತುಪಡಿಸಿ, ಉಳಿದವರು 5 ಅಥವಾ ಅದಕ್ಕಿಂತ ಹೆಚ್ಚಿನ ಜನಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಿದೆ. ಈ ನಿಷೇಧಿತ ಪ್ರದೇಶದಲ್ಲಿ ಮತದಾನಕ್ಕೆ ಭಾದಕವಾಗುವಂತಹ ಯಾವುದೇ ಕೃತ್ಯ/ಚಟುವಟಿಕೆಗಳನ್ನು ನಿಷೇಧಿಸಿದೆ.

ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಸಂಚಾರಿ ದೂರವಾಣಿ(ಮೊಬೈಲ್) ಬಳಕೆಯನ್ನು ಹಾಗೂ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಈ ನಿಷೇಧಾಜ್ಷೆ ಸರಕಾರಿ ಅಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ.

ಯಾವುದೇ ಆಯುಧ, ಕುಡುಗೋಲು, ಖಡ್ಗ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಹಾಗೂ ಸಾಗಾಟ ಮಾಡುವುದನ್ನು ನಿಷೇಧಿಸಿದೆ. ಯಾವುದೇ ಕ್ಷಾರಕ ಯಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಸಾಗಾಟ ಮಾಡುವುದನ್ನು ನಿಷೇಧಿಸಿದೆ.

ಸಹಾಯಕ ಚುನಾವಣಾ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು.

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಯಾ ಪದ ಹಾಡುವುದು, ಚೇಷ್ಠೆಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಯಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳ ಅಂಟಿಸುವುದರಿಂದ ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹಾ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

Comments are closed.