ಕರಾವಳಿ

ಮಾದಕ ದ್ರವ್ಯ ಚಟಕ್ಕೆ ಬಲಿಯಾಗದಂತೆ ಪ್ರತೀ ಹೆತ್ತವರು ತಮ್ಮ ಮಕ್ಕಳ ಮೇಲೆ ಕಣ್ಣಿಡಬೇಕು :ನ್ಯಾಯಾಧೀಶ ಮುಹಮ್ಮದ್ ಮುಜಾಹಿದುಲ್ಲಾ

Pinterest LinkedIn Tumblr

ಮಂಗಳೂರು, ಜೂನ್. 30: ದ.ಕ. ಜಿಲ್ಲಾಡಳಿತ, ದ.ಕ.ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಮಾನಸಿಕ), ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ವಕೀಲರ ಸಂಘ ಮತ್ತು ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವುಗಳ ಸಹಯೋಗದೊಂದಿಗೆ “ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನಾಚರಣೆ” ಕಾರ್ಯಕ್ರಮ ಶುಕ್ರವಾರ ನಗರದ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮವನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಹಮ್ಮದ್ ಮುಜಾಹಿದುಲ್ಲಾ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,ಮಾದಕ ದ್ರವ್ಯ ಚಟಕ್ಕೆ ಪ್ರತೀ ವರ್ಷ ಸುಮಾರು 1.90 ಲಕ್ಷ ಮಂದಿ ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಾದಕ ದ್ರವ್ಯ ನಿಗ್ರಹವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ನಡೆಯಬೇಕಿದೆ. ಅದಕ್ಕಾಗಿ ಜನಜಾಗೃತಿ ಸೃಷ್ಟಿಸಬೇಕಿದೆ ಎಂದು ಹೇಳಿದರು.

ಪ್ರತೀ ಹೆತ್ತವರು ತಮ್ಮ ಮಕ್ಕಳ ಮೇಲೆ ಕಣ್ಣಿಡಬೇಕು. ದಾರಿ ತಪ್ಪುತ್ತಿದ್ದಾರೆ ಎಂದು ಮನವರಿಕೆಯಾದ ತಕ್ಷಣ ಸೂಕ್ತ ಸಲಹೆ ಸೂಚನೆ ನೀಡಬೇಕು. ಮಕ್ಕಳು ಸದಾ ಮೊಬೈಲ್, ವಾಟ್ಸ್‌ಆಯಪ್, ಫೇಸ್‌ಬುಕ್‌ಗಳಲ್ಲಿ ತಲ್ಲೀನರಾಗದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಧೀಶ ಮುಹಮ್ಮದ್ ಮುಜಾಹಿದುಲ್ಲಾ ಅವರು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಉದಯ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಾನಸಿಕ ರೋಗ ತಜ್ಞೆ ಡಾ. ಅರುಣಾ ಯಡಿಯಾಳ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಮುಖ್ಯ ಅತಿಥಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಮಲ್ಲನಗೌಡ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ, ವಾರ್ತಾ ಇಲಾಖೆಯ ಹಿರಿಯ ಉಪನಿರ್ದೇಶಕ ಖಾದರ್ ಷಾ, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ವಿವಿ ಕಾಲೇಜು ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ಭಾರತಿ ಕುಲಾಲ್ ಭಾಗವಹಿಸಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ ಪ್ರಾಸ್ತಾವಿಸಿದ್ದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ. ಜಯಕುಮಾರ್ ಸ್ವಾಗತಿಸಿದರು.

Comments are closed.