ಕರಾವಳಿ

ಮಂಗಳೂರು ಪಾಲಿಕೆಯಿಂದ 472.41 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಕಾರ್ಯಕ್ರಮ ಬುಧವಾರ ಮಂಗಳೂರಿನಲ್ಲಿ ನೂತನವಾಗಿ ನಾಮಕರಣಗೊಂಡ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರಗಿತು.

ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೈಗೆತ್ತಿಕೊಂಡಿರುವ 472.41 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆಯನ್ನು ವಸತಿ ಮತ್ತು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ನಗರವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅತೀ ಶೀಘ್ರದಲ್ಲೇ ಕಾಗದ ರಹಿತ, ಅಟೊಮೈಸೇಶನ್ ಹಾಗೂ ಇ ಆಡಳಿತವವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಗೆ ಒಳಪಟ್ಟಿದ್ದು, ನಗರದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಐದು ವರ್ಷಗಳಲ್ಲಿ 1,000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರಕಿದೆ. ಈ ಕಾಮಗಾರಿಗಳು 10,000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಾಗಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗ ಶ್ರಮಿಸಬೇಕು ಎಂದು ಸಚಿವ ಖಾದರ್ ಸಲಹೆ ನೀಡಿದರು.

ನಗರದ ಕದ್ರಿ ಪಾರ್ಕ್‌ನ ಜಂಕ್ಷನ್ ರಸ್ತೆಯನ್ನು ಅಭಿವೃದ್ಧಿಗೊಳಿಸುವುದು, ವೆನ್ಲಾಕ್ ಆಸ್ಪತ್ರೆ ಅಭಿವೃದ್ಧಿಯ ಮೂಲಕ ನಗರವನ್ನು ಮಾದರಿ ನಗರವನ್ನಾಗಿಸಲು ಮಹಾನಗರ ಪಾಲಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸಚಿವ ಖಾದರ್ ಹೇಳಿದರು.

ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಭಾಸ್ಕರ ಕೆ., ಉಪ ಮೇಯರ್ ಮುಹಮ್ಮದ್ ಕೆ., ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ,  ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಆಳ್ವ, ಲತಾ ಸಾಲ್ಯಾನ್, ನವೀನ್ ಡಿಸೋಜ, ಕಾರ್ಪೊರೇಟರ್ ದಿವಾಕರ್, ಪ್ರಕಾಶ್ ಸಾಲಿಯಾನ್, ಮನಪಾ ಪ್ರತಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಆಯುಕ್ತ ಮುಹಮ್ಮದ್ ನಝೀರ್ ಉಪಸ್ಥಿತರಿದ್ದರು.

Comments are closed.