ಕರಾವಳಿ

ದ.ಕ.ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ 213 ಕೋಟಿ ರೂ. ನಷ್ಟ : ಜಿಲ್ಲಾಧಿಕಾರಿಗಳಿಂದ ಮುಖ್ಯಮಂತ್ರಿಗಳಿಗೆ ವರದಿ

Pinterest LinkedIn Tumblr

ಮಂಗಳೂರು : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ 213 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಿದ್ದು ಸರ್ಕಾರಕ್ಕೆ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದರು.

ಎತ್ತಿನ ಹೊಳೆ ಯೋಜನೆ ಅನುಷ್ಠಾನದಲ್ಲಿ ಏನಾದರೂ ಅಕ್ರಮ ನಡೆದಿದ್ದರೆ ಕಾನೂನು ರೀತಿಯ ಕ್ರಮಕೈಗೊಳ್ಳಲು ಈಗಲೂ ಬದ್ಧ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಈ ಸಂದರ್ಭ ಹೇಳಿದ್ದಾರೆ. ಎಂಡೋಸಲ್ಫಾನ್‌ ಸಂತ್ರಸ್ತರಿಗೆ ಶಾಶ್ವತ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಸಮಗ್ರ ವರದಿಯೊಂದನ್ನು ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಿದ ಮುಖ್ಯಮಂತ್ರಿಗಳು ಶಾಶ್ವತ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪಶ್ಚಿಮಘಟ್ಟದಲ್ಲಿ ಡಾ| ಕಸ್ತೂರಿ ರಂಗನ್‌ ವರದಿ ಜಾರಿ ಕುರಿತು ಮಾತನಾಡಿದ ಕುಮಾರ ಸ್ವಾಮಿಯವರು, ಪಶ್ಚಿಮ ಘಟ್ಟದ ಭಾಗದಲ್ಲಿ ಆಗಿರುವ ಅನಾಹುತಗಳು ಜನರಲ್ಲಿ ಆತಂಕ ಸೃಷ್ಟಿಸಿದೆ. ಯಾವ ಕಾರಣಕ್ಕೆ ಆಗಿದೆ ಎಂಬ ಬಗ್ಗೆ ವಿಶ್ಲೇಷಣೆ ನಡೆಯುತ್ತಿದೆ. ವರದಿಯಲ್ಲಿ ಇರುವ ವೈಜ್ಞಾನಿಕ ಸಲಹೆಗಳನ್ನು ಹಾಗೂ ಹೈದರಬಾದ್‌ನ ತಜ್ಞರ ಸಮಿತಿ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಡಿಕೆ ಕೊಳೆ ರೋಗ ವಿಚಾರದಲ್ಲಿ ರಾಜಕೀಯ ಮಾಡದೆ ನಿಷ್ಪಕ್ಷಪಾತವಾಗಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕೆಂದು ಸಂಸದ ನಳಿನ್‌ ಒತ್ತಾಯಿಸಿದರು. ಈ ಬಗ್ಗೆ ಗಮನಹರಿಸಲು ನನಗೆ ಸ್ವಲ್ಪ ಕಾಲಾವಕಾಶ ಬೇಕು. ಪ್ರಸ್ತುತ ಜನತೆ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಗಮನ ಕೊಡುವ ಅಗತ್ಯವಿದೆ ಎಂದು ಅವರು ಹೇಳಿದರು.

ಪ್ರಗತಿ ಪರಿಶೀಲನ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಹಾಗೂ ಸಮಸ್ಯೆಗಳ ಬಗ್ಗೆ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ, ಶಾಸಕರಾದ ಅಂಗಾರ, ಸಂಜೀವ ಮಠಂದೂರು, ಹರೀಶ್‌ ಪೂಂಜ, ರಾಜೇಶ್‌ ನ್ಯಾಕ್‌, ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯರಾದ ಬಿ.ಎಂ. ಫಾರೂಕ್‌, ಹರೀಶ್‌ ಕುಮಾರ್‌, ಬೋಜೆಗೌಡ, ಉಮಾನಾಥ ಕೋಟ್ಯಾನ್‌, ಶ್ರೀನಿವಾಸ ಪೂಜಾರಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೇಯರ್‌ ಭಾಸ್ಕರ್‌ ಕೆ., ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌, ಜಿಲ್ಲಾ ಎಸ್ಪಿ ಡಾ| ರವಿಕಾಂತೇಗೌಡ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

Comments are closed.