ಕರಾವಳಿ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ

Pinterest LinkedIn Tumblr

ಬೆಂಗಳೂರು, ಆಕ್ಟೊಬರ್.31- ರಾಜ್ಯದಲ್ಲಿ ಕೆಲವು ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ.

ಬುಧವಾರ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಜಿಲ್ಲೆಗಳಿಂದ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಲು ಹಾಗೂ ಪ್ರಶಸ್ತಿ ಪ್ರದಾನ ಮಾಡಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಅವಧಿ ಮುಗಿದ ನಂತರ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಿ ಪ್ರಶಸ್ತಿಗೆ ಆಯ್ಕೆಯಾದ ಎಲ್ಲರಿಗೂ ಪ್ರಶಸ್ತಿ ಪ್ರದಾನ ಮಾಡುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ. ಜಯಮಾಲಾ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ರಾಜ್ಯ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.

ಸಂತೋಷ ಕೂಟ ಮುಂದೂಡಿಕೆ:

ಇದಲ್ಲದೆ, ಪ್ರಶಸ್ತಿ ಪುರಸ್ಕೃತರ ಗೌರವಾರ್ಥ ಮುಖ್ಯಮಂತ್ರಿಯವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಏರ್ಪಡಿಸುವ ಸಂತೋಷಕೂಟವನ್ನು ಸಹ ಪ್ರಶಸ್ತಿ ಪ್ರದಾನ ಸಮಾರಂಭದ ದಿನದಂದು ಏರ್ಪಡಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Comments are closed.