ಕರ್ನಾಟಕ

ಮೈತ್ರಿ ಸರ್ಕಾರದ ವಿರುದ್ಧ ಭಿನ್ನಮತಕ್ಕೆ ಮೊದಲ ವಿಕೆಟ್ ಪತನ; ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜಿನಾಮೆ

Pinterest LinkedIn Tumblr

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಭಿನ್ನಮತಕ್ಕೆ ಮೊದಲ ವಿಕೆಟ್ ಪತನವಾಗಿದ್ದು, ಶಾಸಕ ಸ್ಥಾನಕ್ಕೆ ಉಮೇಶ್ ಜಾಧವ್ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಾಧ್ಯಮಗಳು ವರದಿ ಮಾಡಿರುವಂತೆ ಈ ಹಿಂದೆ ಭಿನ್ನಮತೀಯರ ಗುಂಪಿನಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದ ಕಲಬುರ್ಗಿಯ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.

ಉಮೇಶ್ ಜಾಧವ್ ಅವರು ಖುದ್ದು ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿದ್ದ ಉಮೇಶ್ ಜಾಧವ್ ಅವರನ್ನು ತಮ್ಮ ರಾಜಿನಾಮೆ ಪತ್ರ ನೀಡಿದ್ದಾರೆ.

ಇನ್ನು ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಹಂತದಲ್ಲಿ ಉಮೇಶ್ ಜಾಧವ್ ಅವರ ನಡೆ ಕುತೂಹಲ ಕೆರಳಿಸಿದೆ. ಮೂಲಗಳ ಪ್ರಕಾರ ಉಮೇಶ್ ಜಾಧವ್ ಅವರು ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ನಡೆದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಉಮೇಶ್ ಜಾಧವ್​ ಸರ್ಕಾರ ಮತ್ತು ಕಾಂಗ್ರೆಸ್ ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದರು. ಇದನ್ನೇ ಅಸ್ತ್ರವಾಗಿಸಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಖರ್ಗೆ ವಿರುದ್ಧ ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿಸುವ ಪ್ಲ್ಯಾನ್​ ಮಾಡಿದ್ದು ಸ್ಥಳೀಯ ಮಟ್ಟದಲ್ಲಿ ಮಾತುಕತೆಯಾಗಿದೆ ಎನ್ನಲಾಗುತ್ತಿದೆ. ಹೈಕಮಾಂಡ್​ ನಲ್ಲೂ ಚರ್ಚೆಯಾಗಿದೆ ಎನ್ನಲಾಗುತ್ತೀದೆ. ಇದೇ ಕಾರಣಕ್ಕೆ ಇಂದು ಉಮೇಶ್ ಜಾಧವ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

Comments are closed.