ಕರಾವಳಿ

ಲೋಕಸಭಾ ಚುನಾವಣಾ ಪ್ರಚಾರ ಹಿನ್ನೆಲೆ : ಶೀಘ್ರದಲ್ಲೇ ಪ್ರಧಾನಿ ಮೋದಿ ಮಂಗಳೂರಿಗೆ..

Pinterest LinkedIn Tumblr

ಮಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರಾವಳಿಯ ಬಿಜೆಪಿ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ಮಂಗಳೂರಿಗೆ ಆಗಮಿಸಲಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಚುನಾವಣಾ ಕಣ ರಂಗೇರತೊಡಗಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಅಬ್ಬರ ತಾರಕಕ್ಕೇರಿದೆ. ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಬಿರುಸುಗೊಂಡಿದೆ. ಈ ನಡುವೆ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲಿಯೇ ಮಂಗಳೂರಿಗೆ ಆಗಮಿಸಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕ್ಷೇತ್ರದಲ್ಲಿ ಒಟ್ಟು 55 ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಶೀಘ್ರದಲ್ಲೇ ಮೋದಿ ಅವರ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ.

ಬಿಜೆಪಿಯ ಚುನಾವಣಾ ಪ್ರಚಾರ ತಂತ್ರಗಾರಿಕೆ ಭಾಗವಾಗಿ ಏಪ್ರಿಲ್ 8ರಿಂದ 14ರವರೆಗೆ ಗ್ರಾಮೀಣ ಸಂವಾದ ಮತ್ತು ನಗರ ಸಂವಾದ ಕಾರ್ಯಕ್ರಮ, ರೋಡ್ ಶೋ ಆಯೋಜಿಸಲಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳ 1861 ಬೂತ್‌ಗಳಲ್ಲಿ ಏಪ್ರಿಲ್ 7 ಮತ್ತು 14ರಂದು ಬಿಜೆಪಿ ಮಹಾ ಸಂಪರ್ಕ ಅಭಿಯಾನ ನಡೆಸಲಿದೆ.

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಶಾಸಕರು ಸಹಿತ ಪಕ್ಷದ ಎಲ್ಲ ನಾಯಕರು ವಿವಿಧ ಬೂತ್‌ ಮಟ್ಟದಲ್ಲಿ ನಡೆಯುವ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಏಪ್ರಿಲ್ 3ರಿಂದ 5ರವರೆಗೆ ಎಲ್ಲಾ ಬೂತ್‌ಗಳಲ್ಲಿ ಮನೆ ಸಂಪರ್ಕ ನಡೆಯಲಿದೆ. ಏಪ್ರಿಲ್ 7 ಮತ್ತು 14 ರಂದು ನಡೆಯುವ ಮಹಾ ಸಂಪರ್ಕ ಅಭಿಯಾನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಒಂದೇ ದಿನದಲ್ಲಿ ಜಿಲ್ಲೆಯ ಎಲ್ಲಾ ಮನೆಗಳನ್ನು ಸಂಪರ್ಕಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

Comments are closed.