ಕರಾವಳಿ

ನಾಳೆ ಮಂಗಳೂರಿನಲ್ಲಿ ಮೋದಿ ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ : ಶಾಸಕ ಸುನೀಲ್ ಕುಮಾರ್

Pinterest LinkedIn Tumblr

ಮಂಗಳೂರು, ಎಪ್ರಿಲ್.12: ಪ್ರಧಾನಿ ನರೇಂದ್ರ ಮೋದಿ ಅವರು ಎ.13ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸಲಿದ್ದು, ಅಂತಿಮ ಹಂತದ ಸಿದ್ಧತೆ ಪೂರ್ಣಗೊಂಡಿದ್ದು, ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಮಿಕ್ಕಿ ನರೇಂದ್ರ ಮೋದಿಯವರ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ ಹಾಗೂ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ನಗರದ ಕೇಂದ್ರ ಮೈದಾನದಲ್ಲಿ ನಾಳೆ ನಡೆಯಲಿರುವ ನರೇಂದ್ರ ಮೋದಿಯವರ ಚುನಾವಣಾ ಸಾರ್ವಜನಿಕ ಕಾರ್ಯಕ್ರಮದ ವ್ಯವಸ್ಥೆ ಬಗ್ಗೆ ಮೇಲ್ವಿಚಾರಣೆ ವಹಿಸಿರುವ ಮೋದಿ ರ್‍ಯಾಲಿಯ ಸಂಚಾಲಕ ಶಾಸಕ ಸುನಿಲ್ ಕುಮಾರ್ ಅವರು ಶುಕ್ರವಾರ ಸಂಜೆ ಕೇಂದ್ರ ಮೈದಾನದಲ್ಲಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಲೋಕಸಭಾ ಚುನಾವಣೆ ಪ್ರಚಾರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಎ.13ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಎ.13ರಂದು ಮಧ್ಯಾಹ್ನ 2.45ಕ್ಕೆ ಮಧುರೈಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಪ್ರಧಾನಿ ಮೋದಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4 ಗಂಟೆಗೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. 5.20ರ ಸುಮಾರಿಗೆ ಬಜಪೆಗೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಸಮ್ಮಾನ ನಡೆಯಲಿದ್ದು, ತುಳುನಾಡನ್ನು ನೆನಪಿಸುವ ವಿಶೇಷ ಸ್ಮರಣಿಕೆ ನೀಡಲು ನಿರ್ಧರಿಸಲಾಗಿದೆ.ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎ.13ರಂದು ನಗರದಲ್ಲಿ ವಾಹನ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.ಎ.13ರಂದು ಬೆಳಗ್ಗೆ 8ರಿಂದ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ನಿರ್ಗಮಿಸುವ ವರೆಗೆ ಬಜ್ಪೆ ವಿಮಾನ ನಿಲ್ದಾಣದಿಂದ ನಗರದ ನೆಹರೂ ಮೈದಾನದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದೇರೀತಿ ಪ್ರಧಾನಿ ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನಗಳಿಗೆ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ ಎಂದು ಸುನೀಲ್ ಕುಮಾರ್ ತಿಳಿಸಿದರು.

ಈ ವೇಳೆ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಬಿಜೆಪಿಯ ದ.ಕ.ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು, ಶಾಸಕರಾದ ಉಮಾನಾಥ್ ಕೋಟ್ಯಾನ್, ಡಾ| ಭರತ್ ವೈ ಶೆಟ್ಟಿ, ಜಿಲ್ಲಾ ವಿಭಾಗ ಸಹ ಪ್ರಭಾರಿ ಪ್ರತಾಪಸಿಂಹ ನಾಯಕ್,ವಿ ಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್,ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ,ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಮೂಡಬಿದ್ರೆ ಮುಂತಾದವರು ಉಪಸ್ಥಿತರಿದ್ದರು.

Comments are closed.