ಕರಾವಳಿ

ದ.ಕ. ಜಿಲ್ಲೆಯಾದ್ಯಂತ ಎಪ್ರಿಲ್ 19ರವರೆಗೆ ( 144 ಸೆಕ್ಷನ್) ನಿಷೇಧಾಜ್ಞೆ ಜಾರಿ

Pinterest LinkedIn Tumblr

ಮಂಗಳೂರು, ಎಪ್ರಿಲ್.17: ನಾಳೆ ಮತದಾನ ನಡೆಯಲಿರುವುದರಿಂದ ಜಿಲ್ಲೆಯಲ್ಲಿ ಶಾಂತಿ ಮತ್ತು ಮುಕ್ತ ಮತದಾನಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮಂಗಳವಾರದಿಂದ ಎಪ್ರಿಲ್ 19 ಸಂಜೆ 6 ಗಂಟೆಯವರೆಗೆ ದ.ಕ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಾಲಂ 144 ರನ್ವಯ ನಿಷೇದಾಜ್ಞೆಯನ್ನು ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್‌ರವರು ಆದೇಶಿಸಿದ್ದಾರೆ.

ಈ ನಿಷೇಧಿತ ಅವಧಿಯಲ್ಲಿ ಯಾವುದೇ ಬಹಿರಂಗ ಸಾರ್ವಜನಿಕ ಸಭೆ – ಸಮಾರಂಭ, ಜಾಥಾ, ಮೆರವಣಿಗೆ ಇತ್ಯಾದಿಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಸಕಾರಣ ಇಲ್ಲದೆ 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ನಿಷೇಧಿಸಲಾಗಿದೆ.

ಮಾರಕ ಆಯುಧಗಳನ್ನು ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು ಸಂಜ್ಞೆ ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪತ್ರಿಕೆಗಳ ಅಥವಾ ಇತರೆ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿ ಚಿತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗಳು ಪ್ರೇರಿಪಿಸುವ ಕ್ರಮವನ್ನು ನಿಷೇಧಿಸಲಾಗಿದೆ.

ಈ ಆದೇಶವು ಮತದಾನ ನಡೆಯುವ ಮತಗಟ್ಟೆಗೆ ಬಂದು ಮತಚಲಾಯಿಸಲು ಸಾಲಿನಲ್ಲಿ ನಿಲ್ಲುವ ಮತದಾರರಿಗೆ ಅನ್ವಯಿಸುವುದಿಲ್ಲ. ಮತದಾನ ದಿನದಂದು ಮತಗಟ್ಟೆಯ ನೂರು ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಚುನಾವಣಾ ಪ್ರಚಾರ/ ಘೋಷಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ನಿಷೇಧಾಜ್ಞೆಯು ಖಾಸಗಿ ಕಾರ್ಯಕ್ರಮಗಳಾದ ಮದುವೆ ಗೃಹಪ್ರವೇಶ ಇತರ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ.

ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂಧಿಗಳು ಕಾರ್ಯ ನಿರ್ವಹಣೆಯ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ, ಹಾಗೂ ಬ್ಯಾಂಕ್/ ಎ.ಟಿ.ಎಂ ಭದ್ರತಾ ಸಿಬ್ಬಂದಿಗಳು ಮತ್ತು ಚುನಾವಣಾ ಕರ್ತವ್ಯದಲ್ಲಿ ನಿರತವಾಗಿರುವ ಸಿಬ್ಬಂದಿಗಳು ಮತ್ತು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Comments are closed.