ಕರಾವಳಿ

ನಗರದ ಮಳಿಗೆಗಳಿಗೆ ಪಾಲಿಕೆ ಅಧಿಕಾರಿಗಳ ಧಿಡೀರ್ ದಾಳಿ : ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ವಶ

Pinterest LinkedIn Tumblr

ಮಂಗಳೂರು, ಜೂನ್.25: ನಗರದಲ್ಲಿ ಅಕ್ರಮವಾಗಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ನಡೆಸುತ್ತಿದ್ದ ವ್ಯಾಪಾರ ಮಳಿಗೆಗಳಿಗೆ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡ ಇಂದು ದಾಳಿ ನಡೆಸಿ ಸಾವಿರಾರು ರೂಪಾಯಿ ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡಿದೆ.

ಮಹಾನಗರ ಪಾಲಿಕೆಯ ಉಪ ಆಯುಕ್ತೆ ಗಾಯತ್ರಿ ನಾಯಕ್ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ದಾಳಿ ನಡೆಸಲಾಗಿದ್ದು, ಈ ಸಂದರ್ಭ ಅಂಗಡಿ ಮಾಲಕರು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ಕಪ್, ಪ್ಲೇಟ್, ಬ್ಯಾಗ್ ಮುಂತಾದ ಸುಮಾರು 425 ಕೆಜಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಅಂಗಡಿ ಮಾಲೀಕರಿಗೆ ದಂಡ ವಿಧಿಸಿದೆ.

ನಗರದ ಬೀಬಿ ಅಲಾಬಿ ರಸ್ತೆ, ಮೈದಾನ್ ಕ್ರಾಸ್, ಸೆಂಟ್ರಲ್‌ಮಾರ್ಕೆಟ್ ಮುಂತಾದ ಕಡೆ ವ್ಯಾಪಾರ ಮಳಿಗೆಗಳಿಗೆ ಅಧಿಕಾರಿಗಳು ದಾಳಿ ನಡೆಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಪಾಲಿಕೆ ಉಪ ಆಯುಕ್ತೆ ಗಾಯತ್ರಿ ನಾಯಕ್ ಅವರು, ದಾಳಿ ಸಂದರ್ಭ ಮೂರು ಮಳಿಗೆಗಳಲ್ಲಿ ಅಪಾರ ಪ್ರಮಾಣದಲ್ಲಿ ಪ್ಲಾಸ್ಟಿಕ್‌ ವಸ್ತುಗಳು ಪತ್ತೆಯಾಗಿವೆ.ಇತರ ಅಂಗಡಿಗಳಲ್ಲಿ ಸಾಮಾನ್ಯ ಪ್ರಮಾಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳು ಪತ್ತೆಯಾಗಿದೆ. ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ನಡೆಸುತ್ತಿದ್ದ ವ್ಯಾಪಾರ ಮಳಿಗೆ ಹಾಗೂ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ದಂಡ ಪಾವತಿ ಬಳಿಕವೂ ಅನಧಿಕ ವ್ಯಾಪಾರ ನಡೆಸುವ ವ್ಯಕ್ತಿಗಳ ಉದ್ಯಮ ಪರವಾನಿಗೆ ರದ್ದು ಮಾಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ದಾಳಿ ಸಂದರ್ಭ ಪಾಲಿಕೆಯ ಪರಿಸರ ಇಂಜಿನಿಯರ್ ಮಧು ಎಸ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ ಹಾಗೂ ಇತರ ಸಂಬಂಧ ಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.