ಕರಾವಳಿ

ಕರ್ತವ್ಯ (ಸಖತ್ ಡೀಲ್) ಲೋಪ ಆರೋಪ : ಸುರತ್ಕಲ್ ಇನ್‌ಸ್ಪೆಕ್ಟರ್ ಅಮಾನತು

Pinterest LinkedIn Tumblr

ಮಂಗಳೂರು : ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ ಆರೋಪದಡಿ ಸುರತ್ಕಲ್ ಇನ್‌ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಅಮಾನತುಪಡಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ದನಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಕಮಿಷನರ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ ಸುರತ್ಕಲ್ ಠಾಣಾ ಇನ್‌ಸ್ಪೆಕ್ಟರ್ ಗಂಭೀರವಾಗಿ ಪರಿಗಣಿಸದೆ ಕರ್ತವ್ಯಲೋಪವೆಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಜೊತೆಗೆ ನಗರದ ಹೊರವಲಯದ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ವಿರುದ್ಧ ಕಾರ್ಯಾಚರಣೆ ನಡೆಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಆರೋಪದಡಿ ಸುರತ್ಕಲ್‌ ಇನ್‌ಸ್ಪೆಕ್ಟರ್‌ ರಾಮಕೃಷ್ಣ ಅವರನ್ನು ಅಮಾನತುಪಡಿಸಿ ಮಂಗಳೂರು ಕಮಿಷನರ್‌ ಸಂದೀಪ್‌ ಪಾಟೀಲ್‌ ಆದೇಶ ಹೊರಡಿಸಿದ್ದಾರೆ.

ಮಾತ್ರವಲ್ಲದೇ ಹಣಕಾಸು ಸಂಸ್ಥೆಯೊಂದು ವಂಚನೆ ಮಾಡಿದ ಆರೋಪದಲ್ಲಿ ಸಾರ್ವಜನಿಕರು ಠಾಣೆಗೆ ದೂರು ನೀಡಲು ಬಂದಾಗ ಸುರತ್ಕಲ್‌ ಠಾಣಾ ಇನ್‌ಸ್ಪೆಕ್ಟರ್‌ ಕೇಸು ದಾಖಲಿಸದೆ ದೂರುದಾರರನ್ನು ಹಿಂದಕ್ಕೆ ಕಳುಹಿಸಿದ್ದರು. ಈ ವಿಚಾರ ಕಮಿಷನರ್‌ ಅವರ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್‌ ಠಾಣಾ ಇನ್‌ಸ್ಪೆಕ್ಟರ್‌ ವಿರುದ್ಧ ಕಠಿಣ ಕ್ರಮಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Comments are closed.