ಕರಾವಳಿ

ದ.ಕ.ಜಿಲ್ಲೆಯಲ್ಲಿ ರವಿವಾರದ ಮಳೆ ಪರಿಸ್ಥಿತಿ ನೋಡಿ ಸೋಮವಾರದ ರಜೆ ನಿರ್ಧಾರ : ಡಿಸಿ

Pinterest LinkedIn Tumblr

ಮಂಗಳೂರು, ಜುಲೈ.21: ದ.ಕ. ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಗುರುವಾರ ಆರಂಭವಾದ ಮಳೆ ಶನಿವಾರವೂ ಮುಂದುವರಿದಿದೆ. ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಕೋಪ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶನಿವಾರ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ರವಿವಾರದ ಮಳೆಯ ಪರಿಸ್ಥಿತಿ ನೋಡಿ ಸೋಮವಾರದ ರಜೆಯನ್ನು ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗಿನಿಂದಲೇ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಗಳೂರು ನಗರದ ಹಲವೆಡೆ ರಸ್ತೆ ಮೇಲೆ ನೀರು ಹರಿದು ಅಡಚಣೆ ಉಂಟಾಗಿತ್ತು. ಆದರೆ ಗುರುವಾರದಂತೆ ಕೃತಕ ಪ್ರವಾಹ ಪರಿಸ್ಥಿತಿ ದೊಡ್ಡ ಮಟ್ಟದಲ್ಲಿ ಕಂಡುಬರಲಿಲ್ಲ. ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಮೂಡುಬಿದಿರೆಯಲ್ಲೂ ಉತ್ತಮ ಮಳೆಯಾಗಿದ್ದರಿಂದ ಜಿಲ್ಲೆಯ ನದಿಗಳೆಲ್ಲ ತುಂಬಿ ಹರಿಯುತ್ತಿವೆ.

ಇದೇ ವೇಳೆ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಜು.22ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಜಿಲ್ಲೆಯ ಎಲ್ಲ ಶಾಲೆ, ಕಾಲೇಜು (ಪಿಯುವರೆಗೆ)ಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಣೆ ಮಾಡಿ ಆದೇಶ ಮಾಡಿದ್ದರು. ಇದೀಗ ರವಿವಾರದ ಮಳೆಯ ಪರಿಸ್ಥಿತಿ ನೋಡಿ ಸೋಮವಾರದ ರಜೆಯನ್ನು ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

Comments are closed.