ಕರಾವಳಿ

ಭಾರೀ ಮಳೆ ಹಿನ್ನೆಲೆ : ಮಂಗಳೂರಿನಲ್ಲಿ ಮತ್ತೆ ಎರಡು ದಿನ ರೆಡ್ ಅಲರ್ಟ್ ಘೋಷಣೆ

Pinterest LinkedIn Tumblr

ಮಂಗಳೂರು, ಆಗಸ್ಟ್. 06: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮತ್ತೆ ಮಳೆ ಬಿರುಸಾಗಿದೆ. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಳೆಯಿಂದ ಮತ್ತೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು, ಮತ್ತೆ ಮುಂಗಾರು ಚುರುಕುಗೊಂಡ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವುದಾಗಿ ತಿಳಿಸಿದರು.

ಈಗಾಗಲೇ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ, ಮರ ಧರೆಗುರುಳುತ್ತಿದ್ದು , ನದಿಗಳ ಉಕ್ಕಿ ಹರಿಯುತ್ತಿರುವ ಬಗ್ಗೆ ವರದಿಗಳಾಗುತ್ತಿದೆ. ಈ ಹಿನ್ನಲೆಯಲ್ಲಿ ನೆರೆ ಪೀಡಿತ ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರಬೇಕು. ನೆರೆ ಹಾವಳಿ ಆಗುವ ಸಂದರ್ಭದಲ್ಲಿ ಅಧಿಕಾರಿಗಳ ಸೂಚನೆ ಪಾಲಿಸಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಡಲತೀರದಲ್ಲಿ ಕಡಲ್ಕೊರೆತ ಉಂಟಾಗುವ ಸಾಧ್ಯತೆ ಇದ್ದು, ಕಡಲ ತೀರವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

Comments are closed.