ಕರಾವಳಿ

ಭಾರೀ ಮಳೆಯ ಮುನ್ಸೂಚನೆ : ದ.ಕ.ಜಿಲ್ಲೆಯಲ್ಲಿ ಇಂದು ಮತ್ತೆ ನಾಳೆ ರೆಡ್ ಅಲರ್ಟ್ ಘೋಷಣೆ

Pinterest LinkedIn Tumblr

ಮಂಗಳೂರು,ಆಗಸ್ಟ್. 14 : ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮತ್ತೆ ಮಳೆ ಬಿರುಸಾಗಿದ್ದು, ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಆ.14 ರ ಮಧ್ಯಾಹ್ನ 1 ಗಂಟೆಯ ಬಳಿಕ ಆ.15 ರ 8.30 ರವರೆಗೆ, ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡದಲ್ಲಿ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ನಾಳೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವುದಾಗಿ ಜಿಲ್ಲಾಧಿಕಾರಿಗಳು ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ, ಮರ ಧರೆಗುರುಳುತ್ತಿದ್ದು , ನದಿಗಳ ಉಕ್ಕಿ ಹರಿಯುತ್ತಿರುವ ಬಗ್ಗೆ ವರದಿಗಳಾಗುತ್ತಿದೆ. ಇದಲ್ಲದೆ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಹಾಗೂ ನದಿಗಳಲ್ಲಿ ಮೀನುಗಾರಿಕೆಗೆ ತೆರಳಬಾರದು. ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯಬಾರದು ಎಂದು ಡಿಸಿ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಡಲತೀರದಲ್ಲಿ ಕಡಲ್ಕೊರೆತ ಉಂಟಾಗುವ ಸಾಧ್ಯತೆ ಇದ್ದು, ಕಡಲ ತೀರವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಂಜಾಗೃತ ಕ್ರಮವಾಗಿ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಮೊಬೈಲ್, ಕಚೇರಿಯ ದೂರವಾಣಿ ಚಾಲನೆಯಲ್ಲಿರಬೇಕು. ವಾಹನ ಸೇರಿದಂತೆ ತುರ್ತು ನೆರವಿಗೆ ಬೇಕಾದ ಅಗತ್ಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು ಎಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Comments are closed.