
ಮಂಗಳೂರು : ಮಂಗಳೂರು ನಗರದ ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಇಬ್ಬರು ಮಹಿಳಾ ಪಿಂಪ್ ಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಮಹಿಳಾ ಪಿಂಪ್ ಗಳನ್ನು ಕಾಸರಗೋಡು ಮಂಜೇಶ್ವರದ ಆರುಂದತಿ, (38) ಹಾಗೂ ಮಂಗಳೂರು ಜೆಪ್ಪಿನಮೊಗರು ನಿವಾಸಿ ಸರಸ್ವತಿ (37) ಎಂದು ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳಾದ ರಂಜಿತಾ ಹಾಗೂ ದಿಲ್ ರಾಜ್ ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಗಸ್ಟ್ 26ರಂದು ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ದ್ವಾರದ ಬಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ಮಹಿಳಾ ಪಿಂಪ್ ಗಳ ವಶದಿಂದ 2 ಮೊಬೈಲ್ ಫೋನ್ ಗಳನ್ನು ಹಾಗೂ ನಗದು ಹಣ ರೂ. 20,800/- ನ್ನು ವಶಪಡಿಸಿಕೊಳ್ಳಲಾಗಿದೆ.
ಮಹಿಳಾ ಪಿಂಪ್ ಗಳು ಈ ಮನೆಯನ್ನು ಬಾಡಿಗೆಗೆ ಪಡೆದು ಯುವತಿಯರನ್ನು ಈ ಮನೆಯಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದರು. ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಓರ್ವ ನೊಂದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳಾ ಪಿಂಪ್ ಗಳನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಲ್ಲದೇ ಯುವತಿಯನ್ನು ವೇಶ್ಯಾವಾಟಿಕೆಗೆ ಬೆಂಗಳೂರಿನಿಂದ ಕರೆತಂದ ಆರೋಪಿ ರಂಜಿತಾ ಹಾಗೂ ವೇಶ್ಯಾವಾಟಿಕೆ ದಂಧೆಗೆ ಮನೆಯನ್ನು ಬಾಡಿಗೆಗೆ ನೀಡಿದ ಮನೆಯ ಮಾಲೀಕರಾದ ದಿಲ್ ರಾಜ್ ಎಂಬವರು ತಲೆಮರೆಸಿಕೊಂಡಿದ್ದು, ಅವರ ವಿರುದ್ದ ಕೂಡಾ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತರಾದ ಡಾ: ಪಿ.ಎಸ್ ಹರ್ಷ, ಪೊಲೀಸ್ ಉಪ ಆಯುಕ್ತರವರಾದ ಆರುಣಾಂಶು ಗಿರಿ, (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಲಕ್ಷ್ಮಿ ಗಣೇಶ್, (ಅಪರಾಧ & ಸಂಚಾರ), ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್, ಪಿಎಸ್ಐ ಕಬ್ಬಾಳ್ ರಾಜ್ ಹೆಚ್ ಡಿ, ಹಾಗೂ ಸಿಸಿಬಿ ಸಿಬ್ಬಂದಿಗಳು ಭಾಗವಹಿಸಿದ್ದರು.
Comments are closed.