ಕರಾವಳಿ

ಬೈಂದೂರಿನಲ್ಲಿ ಕಾರುಗಳೆರಡರ ನಡುವೆ ಭೀಕರ ಅಪಘಾತ: ಓರ್ವ ಸಾವು, ಮೂವರು ಗಂಭೀರ

Pinterest LinkedIn Tumblr

ಕುಂದಾಪುರ: ಕಾರುಗಳೆರಡರ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಭಟ್ಕಳದ ಹೋಟೆಲ್ ಉದ್ಯಮಿ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾಯ್ಕನಕಟ್ಟೆ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಭಟ್ಕಳದಲ್ಲಿ ಹೋಟೆಲ್ ನಡೆಸುತ್ತಿರುವ ನೂರುಲ್ ಅಮೀನ್(48) ಮೃತಪಟ್ಟವರು.

ಇಂದು ಮುಂಜಾನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಅಲ್ಲಿಂದ ಭಟ್ಕಳದತ್ತ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ನೂರುಲ್ ಅಮೀನ್ ಅವರ ಮಾರುತಿ ಸ್ವಿಪ್ಟ್ ಕಾರು ರಸ್ತೆಯ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಇಯಾನೋ ಕಾರಿಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನೂರುಲ್ ಅಮೀನ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎನ್ನಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮಹಿಳೆ ಹಾಗೂ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತಕ್ಕೆ ತೀವೃತೆಗೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಘಟನಾ ಸ್ಥಳಕ್ಕೆ ಬೈಂದೂರು ಪಿಎಸ್ಐ ತಿಮ್ಮೇಶ್ ಬಿ.ಎನ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ವರದಿ- ಯೋಗೀಶ್ ಕುಂಭಾಸಿ)

Comments are closed.