ಕರಾವಳಿ

ಖ್ಯಾತ ಸ್ಯಾಕ್ಸೊಫೋನ್ ವಾದಕ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಕದ್ರಿ ಗೋಪಾಲನಾಥ್ ವಿಧಿವಶ

Pinterest LinkedIn Tumblr

ಮಂಗಳೂರು.ಆಕ್ಟೋಬರ್.11 ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಖ್ಯಾತ ಸ್ಯಾಕ್ಸೊಫೋನ್ ವಾದಕ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರಾವಳಿಯ ನೆಚ್ಚಿನ ಡಾ. ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿ ಗೋಪಾಲನಾಥ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ನಿಧನರಾಗಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಕದ್ರಿ ಗೋಪಾಲನಾಥ್ ಅವರು ಪತ್ನಿ ಮತ್ತು ಪುತ್ರ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು ಪದವಿನಂಗಡಿ ಮನೆಯಲ್ಲಿ ಇಂದು ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.

ಕದ್ರಿ ಗೋಪಾಲನಾಥ್ ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕರು. ಸ್ಯಾಕ್ಸೊಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದವರಾಗಿದ್ದಾರೆ.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು 1950 ಡಿಸೆಂಬರ್ 6 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಸಮೀಪದ ಸಜ್ಜಿಪಮೂಡದಲ್ಲಿ ಜನಿಸಿದರು. ತಂದೆ ತನಿಯಪ್ಪ, ನಾಗಸ್ವರ ವಿದ್ವಾಂಸರು, ತಾಯಿ ಗಂಗಮ್ಮ.

ಕದ್ರಿ ಗೋಪಾಲನಾಥರು ಬಾಲ್ಯದಿಂದಲೇ ತಂದೆಯವರಿಂದ ನಾಗಸ್ವರ ಶಿಕ್ಷಣವನ್ನು ಪಡೆದರು. ಆದರೆ ಅವರ ಬದುಕಿಗೆ ತೆರೆದದ್ದು ಮತ್ತೊಂದು ಬಾಗಿಲು. ಒಮ್ಮೆ ಅವರು ಮೈಸೂರು ಅರಮನೆಯ ಬ್ಯಾಂಡ್ ಸೆಟ್ನೊಂದಿಗೆ ಸ್ಯಾಕ್ಸಫೋನ್ ವಾದನವನ್ನು ಕೇಳಿ ಆ ವಾದ್ಯದಲ್ಲಿರುವ ವೈವಿದ್ಯತೆಗೆ ಮನಸೋತು ಸ್ಯಾಕ್ಸಫೋನಿನಲ್ಲಿಯೇ ಪ್ರಾವೀಣ್ಯತೆ ಸಂಪಾದಿಸಬೇಕೆಂಬ ದೃಢ ನಿರ್ಧಾರ ಕೈಗೊಂಡರು. ಇದಕ್ಕಾಗಿ ಅವರು ನಡೆಸಿದ ನಿರಂತರ ತಪಸ್ಸು ಇಪ್ಪತ್ತು ವರ್ಷಗಳದ್ದು. ಕಲಾನಿಕೇತನದ ಎನ್. ಗೋಪಾಲಕೃಷ್ಣ ಅಯ್ಯರ್ ಅವರಿಂದ ಅವರು ಸ್ಯಾಕ್ಸಫೋನ್ ವಾದ್ಯದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ನುಡಿಸುವುದನ್ನು ಕಲಿತರು. ಅತ್ಯಂತ ಶ್ರದ್ಧೆಯಿಂದ ಸಂಗೀತವನ್ನು ಅಭ್ಯಾಸ ಮಾಡಿದ ಗೋಪಾಲನಾಥರು ಕರ್ನಾಟಕ ಸಂಗೀತ ಮತ್ತು ಸ್ಯಾಕ್ಸೊಫೋನ್ ವಾದ್ಯಗಳೆರಡರಲ್ಲೂ ಪ್ರಭುತ್ವ ಸಾಧಿಸಿದರು

ಇವರು ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರಾಗಿದ್ದರು. ಕದ್ರಿ ಗೋಪಾಲನಾಥರಿಗೆ ಸಲ್ಲದ ಪ್ರಶಸ್ತಿಗಳೇ ಇಲ್ಲ. ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.

ವಿದೇಶಗಳಲ್ಲೂ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಬಿಬಿಸಿಯ ಆಹ್ವಾನದ ಮೇರೆಗೆ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ ಕಚೇರಿ ನಡೆಸಿದ ಮೊಟ್ಟಮೊದಲ ಕರ್ನಾಟಕ ಸಂಗೀತ ಕಲಾವಿದ. ಬರ್ಲಿನ್, ಮೆಕ್ಸಿಕೋ, ಪ್ಯಾರಿಸ್, ಸ್ವಿಜರ್‌ಲ್ಯಾಂಡ್, ಯು.ಕೆ, ಅಮೆರಿಕಾ, ಕೆನಡಾ, ಆಸ್ಟ್ರೇಲಿಯಾ, ಜರ್ಮನಿ, ಸಿಂಗಪೂರ್, ಬಹರೇನ್, ಕ್ವೆಟಾರ್, ಮಸ್ಕಟ್, ಮಲೇಷಿಯಾ, ಶ್ರೀಲಂಕಾ ಮುಂತಾದೆಡೆ ಯಶಸ್ವಿ ಕಚೇರಿಗಳನ್ನು ನಡೆಸಿದ್ದಾರೆ. ಚೆನ್ನೈನ ನಾರದ ಗಾನಸಭಾದಲ್ಲಿ 400 ಮಂದಿ ಕಲಾವಿದರೊಡನೆ ನಡೆಸಿಕೊಟ್ಟ ಕಾರ್ಯಕ್ರಮದಿಂದ ಬಂದ 6-7 ಲಕ್ಷ ರೂ.ಗಳನ್ನು ಕಾರ್ಗಿಲ್ ಯುದ್ಧ ನಿಧಿಗಾಗಿ ಸಮರ್ಪಣೆ ಮಾಡಿದ್ದಾರೆ.

Padmashri Dr Kadri Gopalnath, one of the pioneers of Carnatic music, who has been playing saxophone for decades has left us today. We are deeply saddened by this loss. May care and love of those around you provide comfort and peace to get my dear friend Manikanth Kadri and his family through the days ahead. Our most sincere condolences.

Comments are closed.