ಕರಾವಳಿ

ಶಾಲಾ ಕಾಲೇಜುಗಳ ಸಮೀಪ ತಂಬಾಕು ಉತ್ಪನ್ನ ಮಾರಾಟ ಮಾಡಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು : ಜಿಲ್ಲೆಯ ಶಾಲಾ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಮಾತಾನಾಡಿದ ಅವರು, ತಂಬಾಕು ವ್ಯಸನ ತಡೆಗಟ್ಟಲು ಶಾಲಾ ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿಗಳ ಮೂಲಕ ಪರಿಣಾಮಕಾರಿಯಾದ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲೆಯ ನೂರು ಗಜ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಹೇಳಿದರು.

ತಂಬಾಕು ವ್ಯಸನಕ್ಕೆ ಯುವ ಜನರು ಹೆಚ್ಚು ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು . ಈಗಾಗಲೇ ಹಲವಾರು ಶಾಲೆಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಅರಿವು ಕಾರ್ಯಕ್ರಮಗಳು ನಡೆದಿದೆ. ಅದರಲ್ಲಿ ಹಲವು ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಗುರುತಿಸಿದೆ. ಈ ಶಾಲೆಗಳಲ್ಲಿ ತಂಬಾಕು ಮುಕ್ತ ವಲಯ (ಯಲ್ಲೋ ಲೈನ್) ರಚನೆಯಾಗಬೇಕು ಎಂದ ಹೇಳಿದರು. ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಜಿಲ್ಲೆಯ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ಥಾಪನೆ ಮಾಡಬೇಕು ಹಾಗೂ ಇ-ಸಿಗರೇಟು ಮಾರಾಟ ಹಾಗೂ ಜಾಹೀರಾತು ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಕುಟುಂಬ ಕಲ್ಯಾಣ ಅಧಿಕಾರಿ ಸಿಖಂದರ್ ಪಾಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ರಾಜೇಶ್. ಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ್ ಪೂಜಾರಿ, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ| ರಾಜೇಶ್ವರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.