ಕರಾವಳಿ

ನಗರದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ: 525 ಗ್ರಾಂ ಗಾಂಜಾ ವಶ

Pinterest LinkedIn Tumblr

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿರುತ್ತಾರೆ.

ದೇರಳಕಟ್ಟೆ ಸಮೀಪದ ಅಸೈಗೋಳಿ ನಾಟೆಕಲ್ ಸರ್ಕಲ್ ಬಳಿಯ ಮೊಹಮ್ಮದ್ ಹನೀಫ್ (32) ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮೊಹಮ್ಮದ್ ಶಫೀಕ್ (29) ಬಂಧಿತ ಆರೋಪಿಗಳು.

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿ ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಗಳಿಸಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಗಳೂರು ನಗರದ ನೆಹರೂ ಮೈದಾನದ ಬಳಿಯ ಪುಟ್ಬಾಲ್ ಮೈದಾನದ ಪರಿಸರದಿಂದ ಆರೋಪಿಗಳನ್ನು ವಶಕ್ಕೆ ಪಡೆದುಳ್ಳಲಾಗಿದ್ದು, ಆರೋಪಿಗಳಿಂದ ಒಟ್ಟು ರೂ. 21,000/- ಮೌಲ್ಯದ 525 ಗ್ರಾಂ ನಿಷೇಧಿತ ಮಾದಕವಾದ ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲದೇ 2 ಮೊಬೈಲ್ ಫೋನ್ ಗಳು, ನಗದು ರೂ. 2000/- ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 33,000/- ಆಗಿರುತ್ತದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಹನೀಫ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ, ಕೊಣಾಜೆ ಪೊಲೀಸ್, ಮಂಗಳೂರು ದಕ್ಷಿಣ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.