ಕರಾವಳಿ

ಸಿಜೆಐ ಕಚೇರಿ ಕೂಡ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ : ಸುಪ್ರೀಂ ಕೋರ್ಟ್ ಮತ್ತೊಂದು ಮಹತ್ವದ ತೀರ್ಪು

Pinterest LinkedIn Tumblr

ನವದೆಹಲಿ, ನವೆಂಬರ್.13 : ಸಿಜೆಐ ಕಚೇರಿ ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ ಎಂದು ಸುಪ್ರೀ ಕೋರ್ಟ್ ಹೇಳುವ ಮೂಲಕ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ(CJI)ಗಳ ಕಚೇರಿ ಮಾಹಿತಿ ಹಕ್ಕು(ಆರ್ ಟಿಐ) ಕಾಯ್ದೆಯಡಿ ಬರುತ್ತದೆಯೇ, ಇಲ್ಲವೇ ಎಂಬ ಪ್ರಕರಣದ ಬಗ್ಗೆ ಇಂದು ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಾಧೀಶರ ಕಚೇರಿ ಕೂಡ ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಒಳಪಡಲಿದೆ ಎಂದು ವ್ಯಾಖ್ಯಾನಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ ಸರ್ವೋಚ್ಚ ನ್ಯಾಯಾಲಯ ಸಾಂವಿಧಾನಿಕ ಪೀಠ ಕೆಲವು ಷರತ್ತುಗಳನ್ನೂ ಕೂಡ ಅನ್ವಯಿಸಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ಪಂಚಸದಸ್ಯ ಪೀಠ ಇಂದು ಮಧ್ಯಾಹ್ನ 2 ಗಂಟೆಗೆ ತೀರ್ಪು ನೀಡಿದ್ದು, ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಸಿಜೆಐ ಸಾರ್ವಜನಿಕ ಆಸ್ತಿಯಾಗಿದ್ದು, ಅವರ ಕಚೇರಿ ಆರ್ ಟಿಐ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ನ್ಯಾಯಾಂಗದ ಸ್ವಾತಂತ್ರ್ಯವು ನ್ಯಾಯಾಧೀಶರ ಖಾಸಗಿ ಹಕ್ಕು ಅಲ್ಲ. ಅದು ಅವರ ಮೇಲೆ ಸಂವಿಧಾನವು ಹೊರಿಸಿರುವ ಗುರುತರ ಜವಾಬ್ದಾರಿ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.

ಪಾರದರ್ಶಕತೆ ಕಾಯ್ದುಕೊಳ್ಳಲು ಸಿಜೆಐ ಅವರ ಕಚೇರಿಯನ್ನೂ ಕೂಡ ಆರ್‍ಟಿಐಗೆ ಒಳಪಡಿಸಬೇಕೆಂಬ ದೆಹಲಿ ಹೈಕೋರ್ಟ್‍ನ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಎತ್ತಿಹಿಡಿದಿದೆ. ಹೀಗಾಗಿ ಮುಖ್ಯ ನ್ಯಾಯಮೂರ್ತಿಯವರ ಕಾರ್ಯಾಲಯವೂ ಸಹ ಇನ್ನು ಮುಂದೆ ಆರ್‍ಟಿಐ ವ್ಯಾಪ್ತಿಗೆ ಒಳಪಟ್ಟಂತಾಗಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ 3:2 ಅನುಪಾತದಲ್ಲಿ ತೀರ್ಪನ್ನು ಪ್ರಕಟಿಸಿದೆ.

ಪೀಠದ ಓರ್ವ ನ್ಯಾಯಾಧೀಶರು ಸುಪ್ರೀಂಕೋರ್ಟ್ ನ್ಯಾಯಾಂಗದ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳಬೇಕು. ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ಒಳಪಡಿಸುವುದು ಬೇಡ ಎಂಬ ಅಭಿಪ್ರಾಯ ಹೊಂದಿದ್ದರು. ಆದರೆ ಇಬ್ಬರು ನ್ಯಾಯಾಧೀಶರು ಆರ್‍ಟಿಐ ವ್ಯಾಪ್ತಿಗೆ ಮುಖ್ಯನ್ಯಾಯಾಧೀಶರ ಕಚೇರಿ ಕೂಡ ಬರಬೇಕು ಎಂದು ಅಭಿಪ್ರಾಯಪಟ್ಟಿದ್ದರಿಂದ ತೀರ್ಪು ಪ್ರಕಟಗೊಂಡಿದೆ.

2017 ರಲ್ಲಿ ಆರ್ ಟಿಐ ಕಾರ್ಯಕರ್ತ ಸುಭಾಷ್ ಚಂದ್ರ ಅಗರವಾಲ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಸ್ತಿವಿವರದ ಮಾಹಿತಿ ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಈ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿ, ಸಿಜೆಐ ಕಚೇರಿ ಮಾಹಿತಿ ಹಕ್ಕು ಕಾಯ್ದೆಯಡಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ದೇಶದ ಗೌಪ್ಯತೆಗೆ ಧಕ್ಕೆಯುಂಟು ಮಾಡುವ ವಿಷಯಗಳನ್ನು ಹೊರತುಪಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದೆಂಬ ಉದ್ದೇಶದಿಂದ 2005ರ ಅಕ್ಟೋಬರ್ 12 ರಂದು ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಆದರೆ ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿಗಳ ಕಚೇರಿ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಒಳಪಟ್ಟಿಲ್ಲ.

ಆದರೆ, ಸಿಜೆಐ ಕಚೇರಿ ಹಾಗೂ ಸುಪ್ರೀಂಕೋರ್ಟ್ ಕೂಡ ಸಾರ್ವಜನಿಕ ಸ್ವಾಮ್ಯಕ್ಕೆ ಸೇರುತ್ತದೆ ಎಂದು ದೆಹಲಿ ಹೈಕೋರ್ಟ್ 2010ರಲ್ಲಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸ್ವತಃ ಸುಪ್ರೀಂಕೋರ್ಟ್‍ನ ಪ್ರಧಾನಕಾರ್ಯದರ್ಶಿ ಹಾಗೂ ಕೇಂದ್ರೀಯ ಸಾರ್ವಜನಿಕ ಸಂಪರ್ಕಾಧಿಕಾರಿ ಸರ್ವೋಚ್ಚ ನ್ಯಾಯಾಲಯಕ್ಕೆ 2010ರಲ್ಲಿ ಮೂರು ಅರ್ಜಿ ಸಲ್ಲಿಸಿದ್ದರು.

Comments are closed.