ಕರಾವಳಿ

ವದಂತಿ ಹರಡುವವರ ಮೇಲೆ ಕಠಿಣ ಕಾನೂನು ಕ್ರಮ ; ಪೊಲೀಸ್ ಕಮಿಷನರ್ ಎಚ್ಚರಿಕೆ

Pinterest LinkedIn Tumblr

ಮಂಗಳೂರು : ಜಿಲ್ಲೆಯ ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ವದಂತಿ ಹರಡುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಪರಿಶೀಲಿಸಲು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿಎಎಗೆ ಸಂಬಂಧಿಸಿದಂತೆ ಪ್ರತಿಭಟನೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಿಎಎಗೆ ಸಂಬಂಧಿಸಿದಂತೆ ಹಲವಾರು ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಾಗೂ ಈ ಸಂದರ್ಭ ನಗರದಲ್ಲಿ ಯಾವೂದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಮಂಗಳೂರಿನಲ್ಲಿ ಡಿ.20ರ ರಾತ್ರಿ 12ರವರೆಗೆ ಸೆ.144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಇದ್ದರೂ ಪ್ರತಿಭಟನೆ ನಡೆಯಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವವರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಯುಕ್ತರು ಹೇಳಿದರು.

ಎಲ್ಲಾ ಇಲಾಖಾಧಿಕಾರಿಗಳು ತಮ್ಮ ಹಂತದಲ್ಲಿ ಸುವ್ಯವಸ್ಥೆ ಪರಿಶೀಲಿಸಬೇಕು. ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಜಿಲ್ಲೆಯ ಎಲ್ಲಾ ಧಾರ್ಮಿಕ ಸ್ಥಳ, ಪ್ರಾರ್ಥನಾಲಯಗಳಲ್ಲಿ ಯಾವುದೇ ಅನಪೇಕ್ಷಿತ ಚಟುವಟಿಕೆ ಗಳಿಗೆ ಅವಕಾಶ ಇಲ್ಲದಂತೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷೀ ಪ್ರಸಾದ್, ಡಿಸಿಪಿ ಅರುಣಾಂಸು ಗಿರಿ, ಅಪರ ಜಿಲ್ಲಾಧಿಕಾರಿ ರೂಪಾ,ನಗರಪಾಲಿಕೆ ಆಯುಕ್ತ ಅಜಿತ್ ಕುಮಾರ್ ಮತ್ತಿತರರು ಇದ್ದರು.

Comments are closed.