ಕರಾವಳಿ

ಕೊರೋನಾ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ; ಉಡುಪಿಯಲ್ಲಿ ನಿತ್ಯ 100 ಮಂದಿ ಡಿಸ್ಚಾರ್ಜ್: ಸಂಸದೆ ಶೋಭಾ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಇದುವರೆಗೆ 767 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 132 ಮಂದಿ ಡಿಸ್ಚಾರ್ಜ್ ಆಗಿದ್ದು, 635 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳಲ್ಲಿ ಇಂದಿನಿಂದ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದರು.

(File Photo)

ಜಿಲ್ಲೆಯಲ್ಲಿ ಇದುವರೆಗೆ 12258 ಮಂದಿಯ ಕೋವಿಡ್ ಮಾದರಿ ಸಂಗ್ರಹಿಸಿದ್ದು, ಅದರಲ್ಲಿ 10992 ಮಂದಿಯ ವರದಿ ನೆಗೆಟಿವ್ ಆಗಿದ್ದು, 769 ವರದಿ ಬರಲು ಬಾಕಿ ಇದೆ, ಪಾಸಿಟಿವ್ ಪ್ರಕರಣಗಳಲ್ಲಿ ಶೇ.98 ಮಂದಿಗೆ ರೋಗ ಲಕ್ಷಣಗಳು ಇಲ್ಲ , ಪಾಸಿಟಿವ್ ಪ್ರಕರಣಗಳ ಚಿಕಿತ್ಸೆಗಾಗಿ ಟಿಎಂಎ ಪೈ ಆಸ್ಪತ್ರೆಯಲ್ಲಿ 125, ಕಾರ್ಕಳದಲ್ಲಿ 75, ಎಸ್.ಡಿ.ಎಂ ಕಾಲೇಜಿನಲ್ಲಿ 180 ಮತ್ತು ಕೊಲ್ಲೂರುನಲ್ಲಿ 250 ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೋವಿಡ್ -19 ಜಿಲ್ಲಾ ನೋಢೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಇದುವರೆಗೆ ಕಂಡು ಬಂದಿರುವ ಪಾಸಿಟಿವ್ ಪ್ರಕರಣಗಳಲ್ಲಿ ಯಾವುದೇ ರೋಗಿಗೆ ಆಕ್ಸಿಜಿನ್, ವೆಂಟಿಲೇಟರ್, ಐ.ಸಿ.ಯು ಸೇವೆ ನೀಡುವಂತಹ ಗಂಭೀರ ಪ್ರಕರಣ ಕಂಡುಬಂದಿಲ್ಲ ಎಲ್ಲರೂ ಚಿಕಿತ್ಸೆಗೆ ಶೀಘ್ರದಲ್ಲಿ ಸ್ಪಂದಿಸುತ್ತಿದ್ದು, ಆರೋಗ್ಯವಾಗಿದ್ದಾರೆ, ಕ್ವಾರಂಟೈನ್ ಕೇಂದ್ರಗಳಿಂದ ತೆರಳಿದವರಿಂದ ಅವರ ಮನೆಯವರಿಗೆ ಹಾಗೂ ಸಮುದಾಯಕ್ಕೆ ರೋಗ ಹರಡಿಲ್ಲ, ಹೋಂ ಕ್ವಾರಂಟೈನ್ ನಲ್ಲಿರುವವರ ಮನೆಗೆ ಪ್ರತಿದಿನ ಆಶಾ ಕಾರ್ಯಕರ್ತೆಯರು ಭೇಟಿ ನೀಡಿ , ಪರಿಶೀಲಿಸುತ್ತಿದ್ದು, ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೇ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ, ಜಿಲ್ಲೆಯ ಸರ್ಕಾರಿ ಕೋವಿಡ್ ಲ್ಯಾಬ್ 10 ದಿನದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಕೋವಿಡ್-19 ವಿರುದ್ದ ಹೋರಾಟದಲ್ಲಿ ಪ್ರತಿಯೊಬ್ಬರೂ ಸೇನಾನಿಗಳಂತೆ ಕಾರ್ಯ ನಿರ್ವಹಿಸಬೇಕಿದ್ದು, ಜಿಲ್ಲೆಯ ಎಲ್ಲಾ ಜನಪ್ರನಿಧಿಗಳು ಆರೋಗ್ಯ ಇಲಾಖೆಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲು ಬದ್ದರಿರುವುದಾಗಿ ತಿಳಿಸಿದ ಸಂಸದೆ ಶೋಭಾ ಕರಂದ್ಲಾಜೆ, ಪ್ರಸ್ತುತ ಜಿಲ್ಲೆಗೆ ಮಹಾರಾಷ್ಟçದಿಂದ ಬರುತ್ತಿರುವ ನಾಗರೀಕರನ್ನು ಕ್ವಾರಂಟೈನ್ ಕೇಂದ್ರಗಳಿಗೆ ತಲುಪಿಸಲು ಸೂಕ್ತ ವಾಹನ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಆರೋಗ್ಯ ಇಲಾಖೆಯಲ್ಲಿನ ಸಿಬ್ಬಂದಿಯ ಕೊರತೆ ಬಗ್ಗೆ ಹೊರ ಗುತ್ತಿಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಾಗೂ ಜಿಲ್ಲೆಗೆ ಇನ್ನೊಂದು ಹೆಚ್ಚುವರಿ ಕೋವಿಡ್-19 ಆಸ್ಪತ್ರೆಯ ಅಗತ್ಯವಿದ್ದಲ್ಲಿ ಪ್ರಸ್ತಾವನೆ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್, ಜಿಪಂ ಸಿಇಓ ಪ್ರೀತಿ ಗೆಹಲೋತ್ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.