ಮಂಗಳೂರು, ಜೂನ್. 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 13 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ 337 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 337 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 13 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ8,281ಕ್ಕೆ ಏರಿಕೆಯಾಗಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 138, ಕಲಬುರಗಿ 52, ಬಳ್ಳಾರಿ 37, ಹಾಸನ 18, ದಕ್ಷಿಣ ಕನ್ನಡ 13, ದಾವಣಗೆರೆ 12, ಉಡುಪಿ 11, ಬೀದರ್ 10, ಮೈಸೂರು 6, ಕೊಪ್ಪಳ 6, ಯಾದಗಿರಿ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ಮಂಡ್ಯ, ಧಾರವಾಡ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಬಾಗಲಕೋಟೆಯಲ್ಲಿ ತಲಾ 3, ಚಿಕ್ಕಮಗಳೂರು, ತುಮಕೂರಿನಲ್ಲಿ ತಲಾ 2, ಬೆಳಗಾವಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗದಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.
ದ.ಕ.ಜಿಲ್ಲೆಯಲ್ಲಿ ಒಂದು ವಿಶೇಷ ಪ್ರಕರಣ ಪತ್ತೆ :
13 ಸೋಂಕಿತರ ಪೈಕಿ ಜೂ.16ರಂದು ಶಾರ್ಜಾದಿಂದ ಏಳು ಮಂದಿ, ಜೂ.11ರಂದು ಸೌದಿ ಅರೇಬಿಯದಿಂದ ನಾಲ್ವರು ವಾಪಸಾಗಿದ್ದರು. ಎಲ್ಲರನ್ನೂ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಗಂಟಲು ದ್ರವ ಮಾದರಿಯ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 22 ಮತ್ತು 78 ವರ್ಷದ ವೃದ್ಧರು ಮಂಗಳೂರಿನವರಾಗಿದ್ದು, ‘ಇನ್ಫ್ಲೂಯೆಂಝಾ ಲೈಕ್ ಇಲ್ನೆಸ್’ ವಿಶೇಷ ಪ್ರಕರಣವೆಂದು ಪರಿಗಣಿಸಲಾಗಿದೆ. ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ .
ದ.ಕ.ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 422ಕ್ಕೆ ಏರಿಕೆಯಾಗಿದ್ದು, ಈ ಪೈಕಿ 10 ಮಂದಿ ಹೊರ ಜಿಲ್ಲೆಯವರು. ಈ ನಡುವೆ 30 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 60 ಮಂದಿಯ ವರದಿ ಬರಲು ಬಾಕಿಯಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದು ಕೊರೋನಾಗೆ ಹತ್ತು ಮಂದಿ ಬಲಿ :
ಬೆಂಗಳೂರು ನಗರ ಜಿಲ್ಲೆಯಲ್ಲಿ ಏಳು, ಬೀದರ್ ನಲ್ಲಿ ಎರಡು ಮತ್ತು ವಿಜಯಪುರ ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 124ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು 8,281 ಕೊರೋನ ಸೋಂಕಿತರ ಪೈಕಿ 5,210 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 230 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,943 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Comments are closed.