ಕರಾವಳಿ

ಗುಡ್ಡ ಕುಸಿತ ; ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

Pinterest LinkedIn Tumblr

ಮಂಗಳೂರು / ಬೆಂಗಳೂರು : ಭಾರೀ ಮಳೆಯಿಂದಾಗಿ ಭಾನುವಾರ ದ.ಕ.ಜಿಲ್ಲೆಯ ಮಂಗಳೂರಿನ ಹೊರವಲ ಯದ ಗುರುಪುರ ಕೈಕಂಬದ ಬಂಗ್ಲಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಕ್ಕಳ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಾತ್ರವಲ್ಲದೇ ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ ಸಚಿವರು, ಅಧಿಕಾರಿಗಳಿಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಜಿಲ್ಲಾಡಳಿತದ ಸಕಲ ಪ್ರಯತ್ನದ ಹೊರತಾಗಿಯೂ ಮಕ್ಕಳನ್ನು ರಕ್ಷಿಸಲು ಅಸಾಧ್ಯವಾಗಿದ್ದು, ಇದಕ್ಕೆ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಮೃತ ಮಕ್ಕಳ ಕುಟುಂಬಕ್ಕೆ ಈ ಕೂಡಲೇ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ದ.ಕ.ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಈ ಪ್ರದೇಶದಲ್ಲಿ ಸಿಲುಕಿಕೊಂಡಿರುವವರನ್ನು ಸುರಕ್ಷಿತ ಸ್ಥಳಾಗಳಿಗೆ ಸ್ಥಳಾಂತರ ಮಾಡುವಂತೆಯೂ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಈಗಾಗಲೇ 19 ಮನೆಗಳಿಂದ 118 ಮಂದಿಯನ್ನು ತೆರವುಗೊಳಿಸಿ ಸೂಕ್ತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಉಳಿದಂತೆ 60 ಮನೆಗಳಲ್ಲಿರುವ ಸ್ಥಳೀಯರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಲಾಗಿದೆ. ಬೋಂಡಂತಿಲ ಗ್ರಾಮದ ಬಳಿ ಗುರುತಿಸಿರುವ ಜಾಗದಲ್ಲಿ ಮನೆಗಳನ್ನು ನಿರ್ಮಿಸಿ ಎಲ್ಲಾ ಸಂತ್ರಸ್ತರನ್ನು ಸ್ಥಳಾಂತರಿಸಲು ಜಿಲ್ಲಾಡಳಿತಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಇನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ಥಳೀಯರು, ಪೊಲೀಸರು, ಎನ್ ಡಿ ಅರ್ ಎಫ್ ತಂಡ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್​ ಕುಮಾರ್​ ಕಟೀಲು, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮತ್ತು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಗೆ ಸಹಕರಿಸಿದರು.

ಇದೇ ವೇಳೆ, ಸರ್ಕಾರದಿಂದ ಹೊಸ ಮನೆಗಳನ್ನು ನಿರ್ಮಿಸಲಾಗುವುದು ಎಂದು ಸಚಿವ ಪೂಜಾರಿ ಕುಟುಂಬಗಳಿಗೆ ಭರವಸೆ ನೀಡಿದರು.

ಪ್ರಮುಖ ಅಂಶಗಳು :

ಗುರುಪುರದಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವು ಪ್ರಕರಣ

ಮೃತ ಮಕ್ಕಳ ಕುಟುಂಬಕ್ಕೆ ಸಿಎಂ ಪರಿಹಾರ ಧನ

ತಲಾ 5 ಲಕ್ಷ ರೂಪಾಯಿ ಪರಿಹಾರ ಧನ ಘೋಷಣೆ

ಪರಿಹಾರ ಧನ ನೀಡುವಂತೆ ದ.ಕ‌ ಜಿಲ್ಲಾಧಿಕಾರಿಗೆ ಸೂಚನೆ

ಗುಡ್ಡ ಪ್ರದೇಶದಲ್ಲಿದ್ದ 19 ಮನೆಗಳ ಸ್ಥಳಾಂತರಕ್ಕೆ ಸೂಚನೆ

ಬೇರೆ ಗ್ರಾಮದಲ್ಲಿ ಮನೆಗಳನ್ನು ನಿರ್ಮಿಸಿ ಕೊಡಲು ಜಿಲ್ಲಾಡಳಿತಕ್ಕೆ ಸೂಚಿಸಿದ ಸಿಎಂ

ಮಂಗಳೂರು ನಗರ ಹೊರವಲಯದ ಗುರುಪುರದ ಬಂಗ್ಲಗುಡ್ಡೆಯಲ್ಲಿ ನಡೆದಿದ್ದ ಘಟನೆ.

Comments are closed.