ಉಡುಪಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಸೋಮವಾರ ಸಂಜೆ ಬಳಿಕ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ಮಂಗಳವಾರ ಬೆಳಿಗ್ಗೆನಿಂದ ಮಳೆ ಪ್ರಮಾಣ ಹೆಚ್ಚಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಕಾರ್ಕಳ, ಕಾಪು, ಕುಂದಾಪುರ ಹಾಗೂ ಬೈಂದೂರು ಭಾಗದಲ್ಲಿ ಮಂಗಳವಾರ ಉತ್ತಮ ಮಳೆಯಾಗುತ್ತಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ಉತ್ತರ ಒಳನಾಡು, ದಕ್ಷಿಣ ಒಳನಾಡುಗಳಲ್ಲಿಯೂ ಭಾರೀ ಮಳೆ ಮುಂದುವರಿದಿದೆ.