ಕರ್ನಾಟಕ

ಯೋಗೇಶ್ ಗೌಡ ಮರ್ಡರ್ ಕೇಸ್: ಮಾಜಿ ಸಚಿವ ವಿನಯ್ ಕುಲಕರ್ಣಿ, ಸೋದರ ವಿಜಯ್ ಕುಲಕರ್ಣಿ ಸಿಬಿಐ ವಶಕ್ಕೆ

Pinterest LinkedIn Tumblr

ಹುಬ್ಬಳ್ಳಿ: ಕಳೆದ ನಾಲ್ಕೂವರೆ ವರ್ಷದ ಹಿಂದೆ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು (ಗುರುವಾರ) ಬೆಳಗ್ಗೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಧಾರವಾಡದ ಬಾರಾಕೂಟ್ರಿಯಲ್ಲಿನ ನಿವಾಸದಲ್ಲಿ ವಿನಯ್ ಕುಲಕರ್ಣಿ ಹಾಗೂ ವಿಜಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಅವರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದೆ.

ಘಟನೆ ಹಿನ್ನೆಲೆ…
ಧಾರವಾಡ ಜಿ.ಪಂ. ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕ ಯೋಗೇಶ್ ಗೌಡ ಅವರನ್ನು 2016, ಜೂನ್ 15ರಂದು ಸಪ್ತಾಪುರದಲ್ಲಿ ಹತ್ಯೆ ಮಾಡಲಾಗಿತ್ತು. ಅವರು ನಡೆಸುತ್ತಿದ್ದ ಜಿಮ್​ನ ಹೊರಗೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಎಸಗಿ ಕೊಲೆ ಮಾಡಲಾಗಿತ್ತು. ಬೈಕ್​ನಲ್ಲಿ ಬಂದಿದ್ದ ಸುಪಾರಿ ಹಂತಕರು ಈ ಕೃತ್ಯ ಎಸಗಿದ್ದರು.

ಆ ಘಟನೆ ಬಳಿಕ ಪೊಲೀಸರು ಧಾರವಾಡದ ಆರು ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. 2019, ಸೆಪ್ಟೆಂಬರ್​ನಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಲಾಯಿತು. ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಸವರಾಜ ಮುತ್ತಿಗೆ ಅವರು ಸಿಬಿಐ ತನಿಖೆಗೆ ತಡೆಯಾಜ್ಞೆ ತಂದಿದ್ದರು. ಆದರೆ, ಸಿಬಿಐ ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತೆರವು ಮಾಡಿಸಿಕೊಂಡಿತ್ತು.

Comments are closed.