ಮಂಗಳೂರು, ನವೆಂಬರ್.15 : ಸಹಕಾರಿ ಸಂಸ್ಥೆಗಳು ಒಗ್ಗಟ್ಟಾಗಿ ಮತ್ತು ಬಲಿಷ್ಠವಾಗಿ ಬೆಳೆಯುತ್ತಿವೆ. ಸಹಕಾರ ಇದ್ದಲ್ಲಿ ಮಾತ್ರ ಸಹಕಾರಿ ಕ್ಷೇತ್ರ ಬೆಳೆಯಲು ಸಾಧ್ಯ. ಸಾಲ ಸೌಲಭ್ಯ ನೀಡುವಲ್ಲಿ ಸಹಕಾರಿ ಬ್ಯಾಂಕುಗಳು ನಂಬರ್ ಒನ್ ಆಗಿವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಭಾನುವಾರ ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಹಕಾರಸಂಸ್ಥೆಗಳನ್ನು ಬಲಪಡಿಸುವ ಸಲುವಾಗಿ ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ಮೈಸೂರು, ಬೆಂಗಳೂರು, ಕಲಬುರ್ಗಿ, ಬೆಳಗಾವಿ ವಿಭಾಗಗಳಡಿ ಸಾಲ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.
ಆತ್ಮ ನಿರ್ಭರ ಯೋಜನೆಯಡಿ ರಾಜ್ಯಕ್ಕೆ ಮೀಸಲಿಟ್ಟ ಅನುದಾನದಲ್ಲಿ ಸಹಕಾರಿ ಕ್ಷೇತ್ರಕೆ 600 ಕೋಟಿ ಒದಗಿಸಬೇಕು ಎಂದು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಈ ಅನುದಾನ ಶೀಘ್ರ ದೊರೆಯುತ್ತೆ ಎಂಬ ಭರವಸೆ ಇದೆ ಎಂದು ಸಚಿವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಸಹಕಾರ ಅಧ್ಯಯನ ಪೀಠ ಆರಂಭಿಸಲು ಸರ್ಕಾರದಿಂದ ಅನುಮತಿ ದೊರಕಿದ್ದು, ಈ ವರ್ಷದಿಂದಲೇ ಆರಂಭಗೊಳ್ಳಲಿದೆ. ಇದು ಹೆಮ್ಮೆಯ ವಿಷಯ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಬಿಜೆಪಿ ಸೇರ್ಪಡೆ ಆಗುವಂತೆ ಪರೋಕ್ಷ ಆಹ್ವಾನ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಜನೌಷಧಿ ಮಳಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದ್ದಾರೆ.
ಅವರು ರಾಷ್ಟ್ರ ಮಟ್ಟದ ನಾಯಕ ಆಗಬೇಕು ಎಂಬುದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ನಮ್ಮೆಲ್ಲರ ಆಸೆ. ಆದರೆ, ಅದಕ್ಕಾಗಿ ಅವರು ನಮ್ಮ ಬಳಿ ಕುಳಿತು ಕೊಳ್ಳಬೇಕು. ಇದು ಬಹಿರಂಗವಾಗಿ ಚರ್ಚಿಸುವ ವಿಚಾರ ಅಲ್ಲ. ನಾನು ಅವರ ಜೊತೆ ವೈಯಕ್ತಿಕವಾಗಿ ಮಾತನಾಡುತ್ತೇನೆ’ ಎಂದು ಅಭಿಪ್ರಾಯ ಪಟ್ಟರು.
ಇದೇ ಸಂದರ್ಭ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆಗೊಂಡಿತು. ಅಲ್ಲದೆ ಉತ್ತಮ ನವೋದಯ ಸ್ವ ಸಹಾಯ ಸಂಘಗಳನ್ನು ಪುರಸ್ಕರಿಸಲಾಯಿತು. ಕಾರ್ಯಕ್ರಮಕ್ಕೆ ಮುನ್ನ ನಡೆದ ಸಹಕಾರ ಜಾಥಾಕ್ಕೆ ಎಸ್ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಚಾಲನೆ ನೀಡಿದರು. ಮೇಯರ್ ದಿವಾಕರ ಪಾಂಡೇಶ್ವರ ಸಹಕಾರ ಸಂಘಗಳ ಮಳಿಗೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೀನು ಮಾರಾಟ ಮಹಾ ಮಂಡಳ ದ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಕೆಎಂಎಫ್ ಅಧ್ಯಕ್ಷ ರವಿರಾಜ ಹೆಗ್ಡೆ, ಎಸ್ ಸಿ ಡಿ ಸಿಸಿ ಅಧ್ಯಕ್ಷ ರವೀಂದ್ರ ಕಂಬಳಿ ಮತ್ತಿತರರು ಉಪಸ್ಥಿತರಿದ್ದರು.