ಕರಾವಳಿ

ಶ್ರೇಷ್ಠ ಸಂತ ಕನಕದಾಸರ ತತ್ವ , ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು : ಸಚಿವ ಪೂಜಾರಿ

Pinterest LinkedIn Tumblr

ಮಂಗಳೂರು, ಡಿಸೆಂಬರ್ 03 : ಕನಕದಾಸರು ನಾಡು ಕಂಡ ಶ್ರೇಷ್ಠ ಸಂತರಲ್ಲಿ ಒಬ್ಬರಾಗಿದ್ದರು, ಅವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಅವರು ಇಂದು ನಗರದ ಜಿಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕನಕದಾಸರು 15-16 ನೇ ಶತಮಾನದಲ್ಲಿ ತಮ್ಮ ದಾಸ ಸಾಹಿತ್ಯದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಪರಿವರ್ತನೆಯ ಹರಿಕಾರರಾಗಿದ್ದರು , ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನ್ನಡ ಭಾಷೆಯಲ್ಲಿ ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು.

ಸಂಸದರಾದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕನಕದಾಸರು ಜಾತಿ ವ್ಯವಸ್ಥೆ, ಸಾಮಾಜಿಕ ಅಸಮಾನತೆ ವಿರುದ್ದ ದನಿ ಎತ್ತಿ ಸಮಾಜ ಸುಧಾರಣೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಅಧ್ಯಕ್ಷತೆಯನ್ನು ವಹಿಸಿದ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ ಇವರು ಕನಕದಾಸರು ಹಾಕಿ ಕೊಟ್ಟ ಮೇಲ್ಪಂಕ್ತಿಯನ್ನು ಅನುಸರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸೋಣ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಹಾಗೂ ಕುರುಬ ಸಮಾಜದ ಮುಖಂಡರುಗಳಾದ ಮಂಜುನಾಥ್ ನೋಟಗಾರ್, ಡಾ.ಕೆ.ಇ ಪ್ರಕಾಶ್, ಶಿವಾನಂದ ಎರಾಜೆರಿ , ಉದಯ ಕುಮಾರ್, ಕರಿಯಪ್ಪ ಗೌಡ , ರವಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Comments are closed.