ಕರಾವಳಿ

ಅಲ್ಪಸಂಖ್ಯಾತರು ಸರ್ಕಾರದ ಸೌಲಭ್ಯ ಪಡೆದು ಉನ್ನತ ಶಿಕ್ಷಣ ಹೊಂದಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು :ಸಚಿವ ಶ್ರೀಮಂತ ಪಾಟೀಲ

Pinterest LinkedIn Tumblr

ಮಂಗಳೂರು, ಫೆಬ್ರವರಿ 12 :ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿಗೆ ಅನೇಕ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಅಲ್ಪಸಂಖ್ಯಾತರು ಸದ್ಭಳಕೆ ಮಾಡಿಕೊಳ್ಳುವುದ ರೊಂದಿಗೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಬಾಳಾಸಾಹೇಬ ಪಾಟೀಲ ಹೇಳಿದರು.

ಮಂಜನಾಡಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಣಾಜೆ ಮತ್ತು ಸರಕಾರಿ ಮುಸ್ಲಿಂ ವಸತಿ ಶಾಲೆ, ಮಂಜನಾಡಿಯಲ್ಲಿನ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಕೊಣಾಜೆ, ಮೌಲಾನಾ ಆಜಾದ್ ಮಾದರಿ ಶಾಲೆ ಪುದು ಫರಂಗಿಪೇಟೆ ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆ ಬೋಳಿಯಾರು ಕಟ್ಟಡಗಳ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಲ್ಪಸಂಖ್ಯಾತರನ್ನು ಉನ್ನತ ಶಿಕ್ಷಣಕ್ಕೆ ಸರ್ಕಾರ ಹಲವು ಸೌಲಭ್ಯಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಬಳಕೆ ಮಾಡಿಕೊಳ್ಳುವುದರೊಂದಿಗೆ ಉನ್ನತ ಶಿಕ್ಷಣವನ್ನು ಹೊಂದಿ ಸಮಾಜದ ಮುಖ್ಯ ವಾಹಿನಿಗೆ ಅಲ್ಪಸಂಖ್ಯಾತರು ಬರಬೇಕು ಎಂದರು.

ಅಲ್ಪಸಂಖ್ಯಾತರ ಪ್ರಗತಿ ಹಾಗೂ ಅಭಿವೃದ್ಧಿಯೆಡೆಗೆ ತೆಗೆದುಕೊಂಡು ಹೋಗಲು ಅಧಿಕಾರಿಗಳು ಎಲ್ಲಾ ರೀತಿಯ ಸಹಕಾರ ಮತ್ತು ಉತ್ತೇಜನ ನೀಡಿ ಪ್ರೋತ್ಸಾಹಿಸಬೇಕು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸಿ ಅವರುಗಳು ಶಿಕ್ಷಣವಂತರಾಗಿ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಗಳನ್ನಾಗಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಯು. ಟಿ. ಖಾದರ್ ಮಾತನಾಡಿ, ಜಿಲ್ಲೆಯಲ್ಲಿ ಈ ವರೆಗೆ 8 ಮೌಲಾನಾ ಆಜಾದ್ ಮಾದರಿ ಶಾಲೆಗಳಿದ್ದು, ಉಚಿತ ವಸತಿ ವ್ಯವಸ್ಥೆ ಹಾಗೂ ಉನ್ನತ ಶಿಕ್ಷಣವನ್ನು ಈ ಸಂಸ್ಥೆಯು ನೀಡುತ್ತಿದೆ ಎಂದರು.

ಶೋಷಿತವರ್ಗಗಳ ಹಾಗೂ ಅಲ್ಪಸಂಖ್ಯಾತರು ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಬೇಕೆಂದರೆ ಪ್ರತಿಯೊಬ್ಬರು ಶಿಕ್ಷಣವಂತರಾಗುವುದರೊಂದಿಗೆ ಮಾನಸಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢರಾಗಬೇಕು ಎಂದ ಅವರು, ಸಮಾಜದಲ್ಲಿ ಅಸಮಾನತೆಗಳನ್ನು ತೊಡೆದು ಹಾಕುವಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಅಲ್ಪ ಸಂಖ್ಯಾತರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶಿಕ್ಷಣ ಬಹಳ ಅಗತ್ಯ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಗುರಿಯನ್ನು ಇಟ್ಟುಕೊಳ್ಳಬೇಕು ಭವಿಷ್ಯದಲ್ಲಿ ಉತ್ತಮ ಶಿಕ್ಷಣ ಹೊಂದುವುದರೊಂದಿಗೆ ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಬೆಂಗಳೂರು ಅಧ್ಯಕ್ಷ ಸಂತೋಷ ರೈ ಬೋಳಿಯಾರ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು, ಪುದುಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಸ್ರೀನಾ, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂಚಲಾಕ್ಷಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.