ಚಿಕ್ಕಬಳ್ಳಾಪುರ, ಫೆಬ್ರವರಿ.23: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಬಳಿ ಜಿಲೆಟಿನ್ ಸ್ಪೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಘಟನೆ ಸಂಬಂಧ ಮಾಹಿತಿ ನೀಡಿರುವ ಸಚಿವ ಡಾ.ಕೆ.ಸುಧಾಕರ್ ಸಿ ದುರಂತದಲ್ಲಿ 6 ಜನರು ಮೃತಪಟ್ಟಿದ್ದಾರೆ ಎಂದು ಹೇಳಿದ್ದು, ಇದೇ ವೇಳೆ ಅವರು ಹಿರೇನಾಗವೇಲಿಯ ಒಬ್ಬರು, ಬಾಗೇಪಲ್ಲಿಯ ಒಬ್ಬರು, ಆಂಧ್ರ ಮೂಲದ ಮೂವರು, ನೇಪಾಳದ ಒಬ್ಬರು ಮೃತಪಟ್ಟಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ :
ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣಗಳಲ್ಲಿ ಹಲವರು ಸಾವನ್ನಪ್ಪಿದ್ದು, ಘಟನೆ ಸಾಕಷ್ಟು ನೋವನ್ನು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಹಾಗೂ ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಷಾದ:
ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ
ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ