ಕರಾವಳಿ

ಹೊರರಾಜ್ಯದಿಂದ ಬರುವ ಕಾರ್ಮಿಕರಲ್ಲಿ ಅನಧಿಕೃತ ಜಾತಿ ಪ್ರಮಾಣ ಪತ್ರ: ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Pinterest LinkedIn Tumblr

ಮಂಗಳೂರು, ಮಾರ್ಚ್ 30: ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಾಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅರ್ಹ ಫಲಾನುಭವಿಗಳನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಕಾದಿರಿಸಲಾಗುವ ಡಿಸಿ ಮನ್ನಾ ಜಮೀನಿನಲ್ಲಿ ಸುಸಜ್ಜಿತ ಕಾಲೋನಿಯನ್ನು ನಿರ್ಮಿಸಿ, ಎಲ್ಲಾ ಜಿಲ್ಲೆಗೆ ಮಾದರಿಯಾಗುವಂತೆ ಉತ್ತಮ ಗುಣಮಟ್ಟದ ರಸ್ತೆ, ಪಾರ್ಕ್, ಶಾಲೆಗಳನ್ನು ಒಳಚರಂಡಿಗಳನ್ನು ನಿರ್ಮಿಸಿ ಉತ್ತಮ ಕಾಲೋನಿಯಾಗಿ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಅವರುಗಳಿಗೆ ವಿದ್ಯಾರ್ಥಿವೇತನವನ್ನು ನೀಡಬೇಕು. ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ಒಮ್ಮೊಮ್ಮೆ ಮಾಹಿತಿಯ ಕೊರತೆ ಕಂಡು ಬಂದಿರುವ ಸಂದರ್ಭದಲ್ಲಿ ಇಲಾಖೆಯಿಂದ ನೀಡಿರುವ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದಾಗ ಸರಿಯಾಗಿ ಸ್ಪಂದಿಸದೇ ಇರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಇಂತಹ ಸಂಗತಿಗಳು ಮರುಕಳಿಸಬಾರದೆಂದು ಎಚ್ಚರಿಕೆ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಉನ್ನತ ವ್ಯಾಸಂಗ ಮಾಡುತ್ತಿದ್ದರೂ ಅವರಿಗೆ ಉದ್ಯೋಗ ದೊರಕುತ್ತಿಲ್ಲ ಆದ್ದರಿಂದ ವಿದ್ಯಾಭ್ಯಾಸದ ಅರ್ಹತೆಗನುಗುಣವಾಗಿ ಸರಕಾರಿ ಕಚೇರಿಗಳು ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವಾಗ ಅವರಿಗೂ ಸಮಾನವಾದ ಅವಕಾಶ ನೀಡಬೇಕು ಎಂದರು.

ಹೊರರಾಜ್ಯದಿಂದ ಬರುವ ಕಾರ್ಮಿಕರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೆಸರಿನಲ್ಲಿ ಅನಧಿಕೃತ ಜಾತಿ ಪ್ರಮಾಣ ಪತ್ರವನ್ನು ಪಡೆಯುವುದು ಕಂಡು ಬರುತ್ತಿದ್ದು, ಅಂತವರ ವಿರುದ್ಧ ಕಡಿವಾಣ ಹಾಕುವುದಲ್ಲದೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತ ಎಂಬ ಹೆಸರಿರುವ ರಸ್ತೆಯಲ್ಲಿ ಓಡಾಡುವ ಬಸ್‍ಗಳು ಕಡ್ಡಾಯವಾಗಿ ಡಾ. ಬಿ. ಆರ್. ಅಂಬೇಡ್ಕರ್ ವೃತ್ತ ಎನ್ನುವ ಫಲಕಗಳನ್ನು ಅಳವಡಿಸಿರಬೇಕು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮುಖಂಡರು ಮಾತನಾಡಿ ಈಗಾಗಲೇ ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಘನತ್ಯಾಜ್ಯ ವಸ್ತುಗಳ ನಿರ್ವಹಣೆಗೆ ಘಟಕ ನಿರ್ಮಿಸುವ ಕಾರ್ಯ ನಡೆಯುತ್ತಿದ್ದು, ಸುಬ್ರಹ್ಮಣ್ಯ ದೇವಸ್ಥಾನದ ವ್ಯಾಪ್ತಿಯಲ್ಲಿ ತ್ಯಾಜ್ಯದಿಂದಾಗಿ ಪರಿಸರದಲ್ಲಿ ಓಡಾಡುವ ಜನರಿಗೆ ದುರ್ವಾಸನೆಯಿಂದ ಓಡಾಡಲು ಕಷ್ಟವಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಅಲ್ಲಿ ಕೂಡಲೇ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ನಂತರ ಸಭೆಯಲ್ಲಿ ಕೊಲ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ಪರಿಶಿಷ್ಟ ಜಾತಿಯವರು ಆಟವಾಡುತ್ತಿದ್ದ ಸರಕಾರಿ ಮೈದಾನದಲ್ಲಿ ಇತರೆ ಜಾತಿಯವರು ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಿ ಅಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿ ಪಡೆದ ಅವರು ಕೂಡಲೇ ಆ ವ್ಯಾಪ್ತಿಗೆ ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಮ್.ಜೆ ರೂಪಾ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಮಂಗಳೂರು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ. ಆನಂದ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್ ಎಸ್.ಬಿ, ವಿವಿಧ ಇಲಾಖಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮುಖಂಡರುಗಳು ಉಪಸ್ಥಿತರಿದ್ದರು.

Comments are closed.