ಕರಾವಳಿ

ಜಿಲ್ಲೆಯಾದ್ಯಂತ ನಿಷೇದಾಜ್ಞೆಇಲ್ಲ : ಜಿಲ್ಲಾಧಿಕಾರಿಗಳ ಅದೇಶದ ಗೊಂದಲಕ್ಕೆ ತೆರೆ ಎಳೆದ ಉಸ್ತುವಾರಿ ಸಚಿವರು

Pinterest LinkedIn Tumblr

ಮಂಗಳೂರು, ಮಾರ್ಚ್ 31 : ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ಆದೇಶದಲ್ಲಿ ಸೂಚಿಸಿರುವಂತೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಮನಗಂಡು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144(3), ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ(26) ಹಾಗೂ (34)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಈ ಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಷೇಧಾಜ್ಷೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿರುತ್ತಾರೆ.

ಆದರೆ ದ.ಕ.ಜಿಲ್ಲಾಧಿಕಾರಿ ಈಗಾಗಲೆ ಹೊರಡಿಸಿ ರುವ ಆದೇಶದಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಯೊಂದನ್ನು ನೀಡಿ ಕೋವಿಡ್ -19 ನಿಯಮದೊಂದಿಗೆ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮ ನಡೆಸಬಹುದಾಗಿದೆ ಎಂದು ತಿಳಿಸಿದ್ದಾರೆ.

ನಿಷೇಧಿತ ಅವಧಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಲಾಗಿದ್ದು, ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸುವುದು ಹಾಗೂ ಮುಂಬರುವ ಧಾರ್ಮಿಕ ಹಬ್ಬಗಳಾದ ಹೋಳಿ ಹಬ್ಬ, ಯುಗಾದಿ, ಷಬ್-ಎ-ಬರಾತ್, ಗುಡ್ ಫ್ರೈಡೇ ಇತ್ಯಾದಿ ಸಂದರ್ಭಗಳಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಸಾರ್ವಜನಿಕ ಉದ್ಯಾನವನಗಳು, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿಗಳಲ್ಲಿ ಸಾರ್ವಜನಿಕ ಸಮಾರಂಭಗಳು, ಸಭೆ, ಜಾತ್ರೆಗಳು, ಮೇಳಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಯಾವುದೇ ವ್ಯಕ್ತಿಗಳು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ರ ಸೆಕ್ಷನ್ 51ರಿಂದ 60 ರ ಅನ್ವಯ, ಐಪಿಸಿ ಸೆಕ್ಷನ್ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಸೆಕ್ಷನ್ 4,5 ಮತ್ತು 10 ರಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದರು.

ಆದರೆ, ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಈ ಬಗ್ಗೆ ಸ್ಪಷ್ಟಣೆ ನೀಡಿದ್ದಾರೆ. ಈಗಾಗಲೆ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್-19 ನಿಯಮದಂತೆ ನಡೆಸಬಹುದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಈ ಬಗ್ಗೆ ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆಯಲು ಮರುಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಬಯಲು/ಮೈದಾನ ಪ್ರದೇಶದಲ್ಲಿ ಗರಿಷ್ಠ 500ಕ್ಕಿಂತ ಅಧಿಕ ಜನರು ಸೇರುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಕೋವಿಡ್ ಸಮುಚಿತ ವರ್ತನೆಯನ್ನು (ಅಂದರೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.

Comments are closed.