ಕರಾವಳಿ

ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಡಾ. ಆರ್. ಜಿ. ಆನಂದ್

Pinterest LinkedIn Tumblr

ಮಂಗಳೂರು, ಏಪ್ರಿಲ್ 09 : ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ಕಾಯ್ದೆ, ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಸದ್ಯರಾದ ಡಾ. ಆರ್. ಜಿ. ಆನಂದ್ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳ ಕಲ್ಯಾಣ ಸಮಿತಿ ಮುಂದೆ ಬಂದ ಮಕ್ಕಳ ಪ್ರಕರಣಗಳ ವಿಚಾರಣೆ ವೇಳೆಯಲ್ಲಿ ರಕ್ಷಣೆ ಮತ್ತು ಪೋಷಣೆ ಅಗತ್ಯವಿದ್ದಲ್ಲಿ ಬಾಲ ಮಂದಿರಗಳಲ್ಲಿ ಅಗತ್ಯ ರಕ್ಷಣೆ ನೀಡಬೇಕು ಎಂದರು.

ಶಿಕ್ಷಣವು ಮಾನವನ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದ್ದು, ಪ್ರತಿಯೊಂದು ಮಕ್ಕಳು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳಬೇಕು, ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ ಅಡಿಯಲ್ಲಿ ನೋಂದಣಿಯಾಗುತ್ತಿರುವ ಬಗ್ಗೆ ಶಿಕ್ಷಣ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಕ್ಕಳ ಹಕ್ಕು ರಕ್ಷಿಸಲು ಚಾಲ್ತಿಯಲ್ಲಿರುವ ಕಾನೂನುಗಳನ್ನು ಪರಿಶೀಲಿಸಿ ಪರಿಣಾಮಕಾರಿಯಾಗಿ ಜಾರಿಗೆ ತರಲು ಶಿಫಾರಸು ಮಾಡುವುದು, ಮಕ್ಕಳ ರಕ್ಷಣೆ ಹಾಗೂ ಹಕ್ಕುಗಳ ಉಲ್ಲಂಘನೆ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು. ಮಕ್ಕಳ ಸಾಗಣೆ ಮತ್ತು ಮಾರಾಟದ ದೂರು ಕೇಳಿ ಬಂದ ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಹಾರ ಕಂಡುಕೊಳ್ಳುವುದು ಆಯೋಗದ ಮುಖ್ಯ ಉದ್ದೇಶವಾಗಿದೆ ಎಂದರು.

ಜಿಲ್ಲೆಯಲ್ಲಿ 19 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದ್ದು, 1 ಪ್ರಕರಣದಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಅವರು, ಜಿಲ್ಲೆಯಲ್ಲಿ ಒಟ್ಟು 62 ಮಕ್ಕಳ ರಕ್ಷಣಾ ಘಟಕಗಳಿದ್ದು, 1986 ಮಕ್ಕಳು ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಯೊಂದು ಮೆಡಿಕಲ್ ಕಾಲೇಜುಗಳಲ್ಲಿ ಹಾಗೂ ಫೀವರ್ ಕ್ಲಿನಿಕ್‍ಗಳಲ್ಲಿ ಮಕ್ಕಳ ಚಿಕಿತ್ಸೆಗೆ ಪ್ರತ್ಯೇಕ ಕೊಠಡಿಗಳು ಇರುವಂತೆ ನೋಡಿಕೊಳ್ಳಬೇಕು ಎಂದ ಅವರು, ಶಾಲಾ-ಕಾಲೇಜು ಮಕ್ಕಳಿಗೆ ಆಗಿಂದ್ದಾಗೆ ಉಚಿತ ಆರೋಗ್ಯ ತಪಾಸಣೆಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ ಹೆರಿಗೆಗಳು ಹೆಚ್ಚು ಆಗುತ್ತಿರುವ ಹಿನ್ನೆಲೆ ತಾಯಿ. ಶಿಶು ಮರಣದ ಸಂಖ್ಯೆ ಕಡಿಮೆಯಾಗುತ್ತಿದ್ದು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಕೆಲಸ ನಿರ್ವಹಿಸುವುದು ಕಂಡು ಬರುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಮಾತನಾಡಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳ ಕಾಯಿದೆ 2005ರಡಿ ನಿಗದಿಪಡಿಸಿರುವಂತೆ ಹಲವಾರು ಜವಾಬ್ದಾರಿ ಹೊಂದಿದ್ದು, ಇದರಲ್ಲಿ ಮುಖ್ಯವಾಗಿ ಬಾಲ ಕಾರ್ಮಿಕರು, ಪೂರ್ವ ಬಾಲ್ಯಾವಸ್ಥೆಯ ಪೋಷಣೆ ಮತ್ತು ಬೆಳವಣಿಗೆ, ಪೋಷಕರ ರಕ್ಷಣೆಯಲ್ಲಿಲ್ಲದ ಮಕ್ಕಳು, ಮಕ್ಕಳ ಆರೋಗ್ಯ ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು, ಬಾಲ್ಯ ವಿವಾಹಗಳಿಗೆ ತಡೆಯುವುದು ಈ ಆಯೋಗದ ಮೂಖ್ಯ ಕರ್ತವ್ಯಗಳಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್, ಡಿಸಿಪಿ ಹರಿರಾಂ ಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಾಪ ಬೋವಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.