
ಮಂಗಳೂರು, ಮೇ 17 : ಮುಂಬರುವ ಮಾನ್ಸೂನ್ ಮಳೆಗಾಲದಲ್ಲಿ ಪ್ರಕೃತಿ ವಿಕೋಪ, ನೆರೆಹಾವಳಿ ಸೇರಿದಂತೆ ಮತ್ತಿತರ ತುರ್ತುಪರಿಸ್ಥಿಯನ್ನು ಎದುರಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವರೊಂದಿಗೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಜಿಲ್ಲಾ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ಎರಡು ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ತೌಕ್ತೆ ಚಂಡಮಾರುತ ದಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮತ್ತು ಗಾಳಿ ಬೀಸುವುದರಿಂದಾಗಿ ಅಲೆಗಳು ಸಮುದ್ರದ ತೀರದಲ್ಲಿನ ಮನೆಗಳಿಗೆ ಹಾಗೂ ನದಿ, ಹಳ್ಳ-ಕೊಳ್ಳಗಳಲ್ಲಿ ನೀರು ನುಗ್ಗಿ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಗಾಳಿಯಿಂದಗಿ ಮರಗಳು ಕೂಡ ಬಿದ್ದಿದ್ದು, ಜಿಲ್ಲಾಡಳಿದಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿರುವುದರಿಂದಾಗಿ ಯಾವುದೇ ಸಾವು ನೋವುಗಳು ಕಂಡುಬಂದಿಲ್ಲ ಎಂದರು.
ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 380 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 28 ಪ್ರದೇಶಗಳಿಗೆ ಹಾನಿ ಉಂಟಾಗಿದೆ. ಮಳೆ ಹಾಗೂ ಗಾಳಿಯಿಂದಾಗಿ 84 ಕುಟುಂಬಗಳಿಗೆ ತೊಂದರೆಯಾಗಿದೆ, 14 ಮನೆಗಳು ಸಂಪೂರ್ಣ ಹಾಳಾಗಿದೆ ಹಾಗೂ 108 ಮನೆಗಳು ಭಾಗಶಃ ಹಾನಿಗೊಳಗಾಗಿದೆ. ಕೃಷಿಯೇತರ ಚಟುವಟಿಕೆ ಹಾಗೂ ಪ್ರಾಣಿಗಳಿಗೆ ಯಾವುದೇ ಹಾನಿಯುಂಟಾಗಿರುವುದಿಲ್ಲ ಎಂದರು.
ನೆರೆ ಸಂತ್ರಸ್ಥರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮುನ್ನ ಅವರ ಕೋವಿಡ್ ಪರೀಕ್ಷೆಗಳನ್ನು ಮಾಡಬೇಕು , ಸೋಂಕು ದೃಢಪಟ್ಟಲ್ಲಿ ಅಂತವರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ವರ್ಗಾಯಿಸಬೇಕು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಶಾಸಕರುಗಳಾದ ಭರತ್ ಶೆಟ್ಟಿ. ವೈ, ಪ್ರತಾಪ್ ಸಿಂಹ ನಾಯಕ್, ರಾಜೇಶ್ ನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್, ಡಿಸಿಪಿ ಹರಿರಾಂ ಶಂಕರ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Comments are closed.