ಕರಾವಳಿ

ದ.ಕ.ಜಿಲ್ಲೆಯಲ್ಲಿ ಅಮ್ಯೂಸ್‍ಮೆಂಟ್ ಪಾರ್ಕ್ ಸೇರಿದಂತೆ ಮತ್ತಷ್ಟು ಚಟುವಟಿಕೆಗಳಿಗೆ ಅನುಮತಿ

Pinterest LinkedIn Tumblr

ಮಂಗಳೂರು : ಕೋವಿಡ್-19 (ಕೊರೊನಾ ವೈರಾಣು ಕಾಯಿಲೆ 2019) ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿರುತ್ತದೆ.

ಈಗಾಗಲೇ ಜಿಲ್ಲೆಯಲ್ಲಿ ಕೆಲವು ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಅಲ್ಲದೆ ಸರ್ಕಾರವು ಹೆಚ್ಚುವರಿ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿ ಕೋವಿಡ್-19 ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ಹೊರಡಿಸಿದೆ.

ಆದ್ದರಿಂದ, ಸರ್ಕಾರದ ಆದೇಶದನ್ವಯ ಪ್ರಸ್ತುತ ಕೋವಿಡ್-19 ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ, ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಅವರು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144(3) ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಕೆಲವು ಆದೇಶ ಹೊರಡಿಸಿರುತ್ತಾರೆ.

ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ.

ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವುದರೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ ಎಸ್.ಒ.ಪಿ.ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತುಗಳಿಗೆ ಒಳಪಟ್ಟು 2021ರ ಜುಲೈ 25 ರಿಂದ ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ.

ಈ ಪೈಕಿ ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳು ಮತ್ತು ಸಭೆಗಳನ್ನು ನಡೆಸಲು ಅನುಮತಿ ಇರುವುದಿಲ್ಲ.

ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 2020ರ ನವೆಂಬರ್ 12 ರಂದು ಹೊರಡಿಸಲಾದ ಸುತ್ತೋಲೆಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಅಮ್ಯೂಸ್‍ಮೆಂಟ್ ಪಾರ್ಕ್ ಮತ್ತು ಅಂತಹ ಇತರೆ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಈ ಪೈಕಿ ಜಲ ಕ್ರೀಡೆ ಅಥವಾ ಜಲ ಸಂಬಂಧಿತ ಸಾಹಸ ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

Comments are closed.