ಕರಾವಳಿ

75ನೇ ಸ್ವಾತಂತ್ರೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳಿಗೆ ಎಡಿಸಿ ಸೂಚನೆ

Pinterest LinkedIn Tumblr

ಮಂಗಳೂರು : ಮುಂಬರುವ ಆಗಸ್ಟ್ 15 ರಂದು 75ನೇ ಸ್ವಾತಂತ್ರೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಸಿದ ಇಲಾಖೆಗಳ ಮುಖ್ಯಸ್ಥರಿಗೆ ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ ಸೂಚಿಸಿದರು.

ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಹಿನ್ನೆಲೆಯಲ್ಲಿ ಸ್ವಾತಂತ್ರೋತ್ಸವನ್ನು ಸರ್ಕಾರದ ಮಾರ್ಗಸೂಚಿಯಂತೆ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಆಗಸ್ಟ್ 15 ರಂದು ಬೆಳಿಗ್ಗೆ 7.45 ಗಂಟೆಗೆ ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 8.45 ಗಂಟೆಗೆ ಜಿಲ್ಲಾ ನೆಹರು ಮೈದಾನದಲ್ಲಿ ಸಮಾವೇಶಗೊಂಡು, 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ, ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಿದ್ದತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕೆಂದರು.

ಈ ಬಾರಿ 75ನೇ ಸ್ವಾತಂತ್ರೋತ್ಸವ ಆಗಿರುವದರಿಂದ ವಿಶೇಷವಾಗಿ ಆಚರಿಸಬೇಕಿದ್ದು, ಪೊಲೀಸ್, ಗೃಹರಕ್ಷಕದಳ, ಎನ್.ಸಿ.ಸಿ ಹಾಗೂ ಅಗ್ನಿಶಾಮಕ ಸಿಬ್ಬಂದಿಒಳಗೊಂಡಂತೆ ಆಕರ್ಷಕ ಪಥಸಂಚಲನ ಹಮ್ಮಿಕೊಳ್ಳಲಾಗುತ್ತಿದೆ. ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಜಿಲ್ಲಾಡಳಿತದಿಂದ ಮುದ್ರಿಸಿ ನೀಡುವುದಾಗಿ ತಿಳಿಸಿದರು.

ಅಲ್ಲದೇ ಇತ್ತೀಚೆಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಪೊಲೀಸ್ ಇಲಾಖೆಯಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ, ಸಮಿತಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗ ಬಾರದು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಕ್ರೀಡಾಂಗಣದಲ್ಲಿ ಸ್ಟೇಜ್ ನಿರ್ಮಾಣ, ಗಣ್ಯರಿಗೆ, ಶಾಸಕರಿಗೆ, ಸಂಸದರುಗಳಿಗೆ ಹಾಗೂ ಸನ್ಮಾನಿತರಿಗೆ, ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು ಎಂದ ಅವರು, ಈ ಆಚರಣೆಯಲ್ಲಿ ಯಾವುದೇ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ ಎಂದು ತಿಳಿಸಿದರು.

ಸಮಾರಂಭದ ಹಿಂದಿನ ದಿನವೇ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡಿಕೊಳ್ಳುವಂತೆ ಆಯಾ ಇಲಾಖೆಗಳಿಗೆ ತಿಳಿಸಿದ ಅವರು, ಸಮಾರಂಭದ ದಿನದಂದು ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು ಹಾಗೂ ಆಯಾ ಇಲಾಖೆಗಳ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ನೆಹರು ಮೈದಾನದಲ್ಲಿ ಜರುಗುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುವಂತೆ ಹೇಳಿದರು.

ಮಂಗಳೂರು ತಾಲ್ಲೂಕು ತಹಶೀಲ್ದಾರ ಗುರುಪ್ರಸಾದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ, ಆಹಾರ ಇಲಾಖೆಯ ಉಪನಿರ್ದೇಶಕ ರಮ್ಯ, ಆರೋಗ್ಯಾಧಿಕಾರಿ ಡಾ.ಕಿಶೋರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.