ಕರಾವಳಿ

ಮುಸ್ಲಿಂ ಸಮುದಾಯದ ಮದುವೆ ಕಾರ್ಯಕ್ರಮದಲ್ಲಿ ಕೊರಗಜ್ಜನ ವೇಷ ಧರಿಸಿ ನರ್ತಿಸಿದ ವರ; ವೀಡಿಯೋ ವೈರಲ್, ವ್ಯಾಪಕ ಆಕ್ರೋಶ…!

Pinterest LinkedIn Tumblr

ವಿಟ್ಲ: ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗಜ್ಜನ ವೇಷ ಹಾಕಿ ಕುಣಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆಂದು ವ್ಯಾಪಕ ಆಕ್ರೋಷ ವ್ಯಕ್ತವಾಗಿದೆ.

ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಕೊಳ್ನಾಡು ನಿವಾಸಿ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿದ್ದು, ಸಾವಿರಾರು ಮಂದಿಗೆ ಔತಣ ಕೂಟವನ್ನು ಏರ್ಪಡಿಸಿದ್ದರು. ಅಂದು ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ ಆಗಮಿಸಿದ್ದಾರೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದಾರೆ. ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಹೋಲುವಂತಹ ದಿರಿಸು ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ವರ ಆಗಮಿಸಿದ ವಿಡಿಯೋ ವೈರಲ್ ಆಗಿದೆ.

ಕೊರಗಜ್ಜನ ವೇಷಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇಂತಹ ಕುಕೃತ್ಯವನ್ನೆಸಗಿ ಹಿಂದೂಗಳ ನಂಬಿಕೆಯನ್ನು ಟೀಕಿಸಿದ್ದಾರೆ, ಹುಚ್ಚಾಟ ಪ್ರದರ್ಶಿಸಿದ ವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಜರುಗಿಸುವ ಮೂಲಕ ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಎನ್ನುವಂತಹ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕುಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Comments are closed.