ಕರ್ನಾಟಕ

ಹಿಂದೂ ಸಂಘಟನೆಯಿಂದ ‘ಮೂಲ ಮಂದಿರ ಚಲೋ’ಗೆ ಕರೆ: ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್

Pinterest LinkedIn Tumblr

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯಸ್ವಾಮಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ತಹಶೀಲ್ದಾರ್ ಶ್ವೇತಾ ರವೀಂದ್ರ ಅವರು ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಯಾವುದೇ ರೀತಿಯ ಸಾರ್ವಜನಿಕ ಸಭೆ, ಮೆರವಣಿಗೆ, ಪ್ರತಿಭಟನೆ ಅಥವಾ ರಥಯಾತ್ರೆಗಳನ್ನು ನಿರ್ಬಂಧಿಸಿದ್ದಾರೆ. ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿರ್ಬಂಧಗಳು ಜೂನ್ 3ರ ಸಂಜೆ 6 ಗಂಟೆಯಿಂದ ಜೂ.5ರ ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್144 ಜಾರಿಯಲ್ಲಿರಲಿದೆ.

ಮಂದಿರಕ್ಕೆ ಚಲೋ ಹಿನ್ನೆಲೆಯಲ್ಲಿ ಪ್ರತೀ ಶನಿವಾರ ನಡೆಯುವ ಸಂತೆಯನ್ನು ಮುಂದೂಡಿರುವುದಾಗಿ ಪುರಸಭಾ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವ ವಿಶ್ವ ಹಿಂದೂ ಪರಿಷತ್ ಸದಸ್ಯರು ಜಾಮಿಯಾ ಮಸೀದಿಯನ್ನು ಪ್ರವೇಶಿಸುವ ಸಂಭವವಿರುವುದರಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಅಂದು ಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ನಡೆಯುವ ಶನಿವಾರದ ಸಂತೆ ರದ್ದುಪಡಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ರೈತರು, ವರ್ತಕರು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ, ಸಂತೆಯನ್ನು ಜೂನ್ 6ರ ಭಾನುವಾರಕ್ಕೆ ಮುಂದೂಡಿರುವುದಾಗಿ ತಿಳಿಸಿದ್ದಾರೆ.

ಈ ನಡುವೆ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಂಡಿರುವ ಅಧಿಕಾರಿಗಳು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಿದ್ದಾರೆ. 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ನಾಲ್ಕು ಕಡೆ ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಎಸ್’ಪಿ ಎನ್ ಸತೀಶ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ಕೂಡ ನಡೆಯಲಿದೆ.

ಹಿಂದೂಪರ ಸಂಘಟನೆಗಳಿಂದ ಶ್ರೀರಂಗಪಟ್ಟಣದಲ್ಲಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಾಮಿಯ ಮಸೀದಿ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಪೊಲೀಸರನ್ನು ಮಸೀದಿಗೆ ಭದ್ರತೆಗಾಗಿ ನಿಯೋಜಿಸಲಾಗಿದೆ. ಹಿಂದೂ ಸಂಘಟನೆಗಳ ಶ್ರೀರಂಗಪಟ್ಟಣ ಚಲೋಗೆ ಕಡಿವಾಣ ಹಾಕಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಈ ಬೆಳವಣಿಗೆ ಕುರಿತು ಜಿಲ್ಲಾಧಿಕಾರಿ ಡಾ.ಅಶ್ವಥಿಯವರು ಮಾತನಾಡಿ, ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Comments are closed.