ಕರಾವಳಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಹಿತ ನಾಲ್ವರ ಬಂಧನ

Pinterest LinkedIn Tumblr

ಮಂಗಳೂರು: ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ಪ್ರದೀಪ್ ಟಿ ಆರ್ ರವರ ನೇತ್ರತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ಪಡೀಲ್ ಬಳಿ ಕಾರನ್ನು ತಪಾಸಣೆ ಮಾಡಿದಾಗ ಎಂಡಿಎಂಎ ಎಂಬ ನಿಷೇದಿತ ಮಾದಕ ವಸ್ತು ಪತ್ತೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಸರಗೋಡಿನ ಉಪ್ಪಳದ ಮಹಮ್ಮದ್ ರಮೀಝ್(24), ಶಿರಿಯಾ ನಿವಾಸಿ ಮೊಹಿದ್ದೀನ್ ರಾಶೀದ್(24), ಉಪ್ಪಳದ ಪಾತೋಡಿ ನಿವಾಸಿ ಅಬ್ದುಲ್ ರವೂಫ್(35) ಹಾಗೂ ಬೆಂಗಳೂರಿನ ಮಡಿವಾಳ ನಿವಾಸಿ ಸಬಿತಾ @ ಚಿಂಚು @ ಸಮೀರಾ(25) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ ಒಟ್ಟು 125 ಗ್ರಾಂ ತೂಕದ 6 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 6 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ರಿಡ್ಜ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ 9,82,000/-ಲಕ್ಷ ಆಗಬಹುದು. ಆರೋಪಿಗಳು ಬೆಂಗಳೂರಿನಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಗಳಿಸಲು ಮಂಗಳೂರು ಕಡೆಗೆ ಬರುತ್ತಿದ್ದರು.

ಆರೋಪಿಗಳ ಪೈಕಿ ಮೊಹಮ್ಮದ್ ರಮೀಝ್ ಎಂಬಾತನ ವಿರುದ್ಧ ಈ ಹಿಂದೆ 2021 ನೇ ಇಸವಿಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ 2 ಪ್ರಕರಣ ದಾಖಲಾಗಿರುತ್ತದೆ. ಈತನು 6 ತಿಂಗಳ ಹಿಂದೆ ಜೈಲ್ ನಿಂದ ಬಿಡುಗಡೆಗೊಂಡಿದ್ದನು. ಆರೋಪಿ ಅಬ್ದುಲ್ ರವೂಫ್ ಎಂಬಾತನ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ನೇ ಇಸವಿಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.