ಕರಾವಳಿ

ತೋಟದ ಮನೆಯಲ್ಲಿ‌ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)

ಕುಂದಾಪುರ/ಉಡುಪಿ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಹಾವೇರಿ ಮೂಲದ ಹನುಮಂತ(55) ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ.

ಸಂತ್ರಸ್ತ ಬಾಲಕಿ ತನ್ನ ತಾಯಿ ಜೊತೆ ತೋಟದ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, ಅದೇ ತೋಟದಲ್ಲಿ ಹನುಮಂತ ಕೆಲಸ ಮಾಡಿಕೊಂಡು ಬೇರೆ ಮನೆಯಲ್ಲಿ ವಾಸಿಸುತ್ತಿದ್ದನು. 2021ರ ಜನವರಿಯಲ್ಲಿ ಹನುಮಂತ ಬಾಲಕಿ ಒಬ್ಬಳೇ ತೋಟದ ಮನೆಯಲ್ಲಿರುವಾಗ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ ಮತ್ತು ತಂಡ ಆರೋಪಿಯನ್ನು ಬಂಧಿಸಿತ್ತು. ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್. ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

18 ಸಾಕ್ಷಿಗಳ ಪೈಕಿ 12 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು. ವೈದ್ಯಕೀಯ ಸಾಕ್ಷಿ, ನೊಂದ ಬಾಲಕಿ ನುಡಿದ ಸಾಕ್ಷಿ ಹಾಗೂ ಇತರೆ ಸಾಕ್ಷಿಗಳು ಅಭಿಯೋಜನೆಗೆ ಪೂರಕವಾಗಿದ್ದು ನ್ಯಾಯಾಲಯವು ಆರೋಪಿಗೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ, ಬಾಲಕಿಗೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ ಒಂದು ವರ್ಷಗಳ ಸಾದಾ ಶಿಕ್ಷೆ ಮತ್ತು ಒಟ್ಟು ದಂಡದಲ್ಲಿ 40 ಸಾವಿರ ರೂ. ಬಾಲಕಿಗೆ ಮತ್ತು 5000 ರೂ. ಸರಕಾರಕ್ಕೆ ಪಾವತಿಸಬೇಕು. ನೊಂದ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ.

ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಫೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು.

 

Comments are closed.