ಕರಾವಳಿ

ಕೊಂಕಣ ರೈಲ್ವೆಯಲ್ಲಿ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Pinterest LinkedIn Tumblr

ಉಡುಪಿ: ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.

ಅವರು ಇಂದು ನಗರದ ಜಿಲ್ಲಾ ಪಂಚಾಯತ್‍ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃಧ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊಂಕಣ ರೈಲ್ವೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ರೈಲುಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಹೆಚ್ಚಿನ ದೂರುಗಳು ದಾಖಲಾಗುತ್ತಿವೆ. ಸಾರ್ವಜನಿಕರು ಈ ಕುರಿತು ತೀವ್ರವಾಗಿ ಆರೋಪಗಳನ್ನು ಮಾಡುತ್ತಿದ್ದು, ರೈಲ್ವೆ ಇಲಾಖೆಯ ಅಧಿಕಾರಿಗಳು ಕಳ್ಳತನ ತಡೆಯಲು ಕೂಡಲೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು. ರೈಲ್ವೆ ಬೋಗಿಗಳಲ್ಲಿ ಸಿಸಿಟಿವಿ ಅಳವಡಿಕೆ, ಪ್ರಯಾಣಿಕರಿಗೆ ಲಾಕರ್ ವ್ಯವಸ್ಥೆ ಮಾಡಬೇಕು. ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಸಿಸಿಟಿವಿ ಗಳನ್ನು ಅಳವಡಿಸುವಂತೆ ಸೂಚನೆ ನೀಡಿದ ಕೇಂದ್ರ ಸಚಿವರು, ಈ ಬಗ್ಗೆ ದೆಹಲಿಯಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಕೂಡಾ ಚರ್ಚಿಸುವುದಾಗಿ ತಿಳಿಸಿದರು.

ರೈಲ್ವೆ ನಿಲ್ದಾಣಕ್ಕೆ ತೆರಳುವ ರಸ್ತೆಯ ದುರಸ್ತಿ ಕುರಿತಂತೆ ರೈಲ್ವೆ, ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ತನಿಖೆ ನಡೆಸಿ, ಶೀಘ್ರದಲ್ಲಿ ಪ್ರಯಾಣಿಕರಿಗೆ ಉತ್ತಮ ರಸ್ತೆ ಸೌಲಭ್ಯ ಒದಗಿಸುವಂತೆ ಹಾಗೂ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್‍ಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವರು, ಕಟಪಾಡಿ, ಉಡುಪಿ ಮತ್ತು ಪಡುಬಿದ್ರಿ ಜಂಕ್ಷನ್‍ಗಳಲ್ಲಿ ಅಪಘಾತಗಳನ್ನು ತಡೆಯಲು ಮತ್ತು ವಾಹನ ದಟ್ಟಣೆಯನ್ನು ನಿಯಂತ್ರಿಸಲು ಸಿಗ್ನಲ್ ಅಳವಡಿಸಬೇಕು, ಕರಾವಳಿ- ಮಲ್ಪೆ ರಸ್ತೆ ಕಾಮಗಾರಿಯನ್ನು ಶೀಘ್ರದಲ್ಲಿ ಆರಂಭಿಸುವಂತೆ ಹಾಗೂ ಪರ್ಕಳದಲ್ಲಿ ತ್ವರಿತಗತಿಯಲ್ಲಿ ಕಾಮಗಾರಿ ಕೈಗೊಳ್ಳುವಂತೆ ಮತ್ತು ಯಾವುದೇ ಕಾನೂನು ತೊಡಕುಗಳಿದ್ದಲ್ಲಿ ಶೀಘ್ರದಲ್ಲಿ ಬಗೆಹರಿಸಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಪ್ರದೇಶದ ಜನತೆಗೆ ಮನೆ ನಿರ್ಮಾಣ ಕುರಿತಂತೆ ವ್ಯಾಪಕ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಪೂರ್ಣ ಗುರಿ ಸಾಧಿಸುವಂತೆ ಹಾಗೂ ಮನೆ ನಿರ್ಮಾಣಕ್ಕೆ ಸುಲಭ ರೀತಿಯಲ್ಲಿ ಸಾಲ ದೊರೆಯುವಂತೆ ಕ್ರಮ ಕೈಗೊಳ್ಳಿ ಎಂದರು.

ಜಿಲ್ಲೆಯ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಗೇರು ಬೆಳೆಗಾರರಿಗೆ ಉತ್ತಮ ತಳಿಯ ಕಸಿ ಗಿಡ ಮತ್ತು ಹೆಚ್ಚು ಇಳುವರಿ ನೀಡುವ ಗೇರು ಗಿಡಗಳನ್ನು ಸರಬರಾಜು ಮಾಡುವಂತೆ ಸೂಚಿಸಿದ ಸಚಿವರು, ಕಿರು ಆಹಾರ ಉದ್ದಿಮೆ ಸ್ಥಾಪನೆ ಕುರಿತಂತೆ ಮೀನುಗಾರಿಕೆ ಇಲಾಖೆ ವತಿಯಿಂದ ರೈತರ ಉತ್ಪಾದಕ ಸಂಸ್ಥೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡುವಂತೆ ತಿಳಿಸಿದರು.

ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ 7 ಲಕ್ಷ ಮಾನವ ಗುರಿ ಸೃಜನೆಗೆ ಇದುವರೆಗೆ 7.35 ಲಕ್ಷ ದಿನಗಳನ್ನು ಸೂಜಿಸಲಗಿದ್ದು, ಕೆರೆ ಸಂಜೀವಿ ಯೋಜನೆಯಡಿ 75 ಕೆರೆಗಳನ್ನು ಆಭಿವೃದ್ದಿಗೊಳಿಸುತ್ತಿದ್ದು ಈಗಾಗಲೇ 15 ಕಾಮಗಾರಿ ಮುಕ್ತಾಯಗೊಂಡಿದ್ದು,60 ಪ್ರಗತಿಯಲ್ಲಿವೆ. ಗ್ರಾಮೀಣ ಭಾಗದಲ್ಲಿ 963 ಕಾಲು ಸಂಕಗಳ ನಿರ್ಮಾಣಕ್ಕೆ ಕ್ರಿಯಾ ಯೋಜನೆ ರೂಪಿಸಿದ್ದು, ಈ ವಷಾಂತ್ಯದೊಳಿಗೆ ಸಂಪೂರ್ಣ ಗುರಿ ಸಾಧಿಸುವ ಮೂಲಕ ಜಿಲ್ಲೆಯನ್ನು ಕಚ್ಛಾ ಕಾಲುಸಂಕ ಮುಕ್ತ ಜಿಲ್ಲೆಯನ್ನಾಗಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಸುಕುಮಾರ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.