ಕರಾವಳಿ

ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯವೆಸಗಲು ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆ ಎನ್​ಐಎ ದಾಳಿ

Pinterest LinkedIn Tumblr

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್​ಐಎ ದಾಳಿಯಾಗಿದೆ.

ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು ರೂಪಿಸಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದ್ದು ಸಿಬ್ಬಂದಿ ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.

ಜುಲೈ 12, 2022 ರಂದು ಬಿಹಾರದ ಪಾಟ್ನಾದಲ್ಲಿ ನಡೆದ ರ್ಯಾಲಿಯಲ್ಲಿ ಈಗ ನಿಷೇಧಿತ ಇಸ್ಲಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಹಲ್ಲೆ ನಡೆಸಲು ಯೋಜನೆ ರೂಪಿಸಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗುತ್ತಿದೆ.

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಮೂಲಕ ಭಾರತಕ್ಕೆ ಹಣ ಬರುತ್ತಿದ್ದು, ಇದನ್ನು ಭಾರತದಲ್ಲಿ ಭಯೋತ್ಪಾದನೆ ಎಸಗಲು ಬಳಸಲಾಗುತ್ತಿದೆ ಎಂಬ ಅಂಶವನ್ನು ಪತ್ತೆಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎನ್​ಐಎ ಅಧಿಕಾರಿಗಳು ಮತ್ತೆ ದಕ್ಷಿಣ ಕನ್ನಡದ ಹಲವು ಕಡೆ ದಾಳಿ ಮಾಡಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಾರ್ಚ್​ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.

 

Comments are closed.