ಕರಾವಳಿ

ಹಾರ್ದಳ್ಳಿ-ಮಂಡಳ್ಳಿ ಗ್ರಾ.ಪಂ ನೂತನ ಕಟ್ಟಡ ಉದ್ಘಾಟನೆ | ಗ್ರಾಮಪಂಚಾಯತಿಗಳಿಂದ ಹಳ್ಳಿಗಳ ಸುಧಾರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Pinterest LinkedIn Tumblr

ಕುಂದಾಪುರ: ಹಳ್ಳಿಗಳ ಸುಧಾರಣೆಯು ಗ್ರಾಮ ಪಂಚಾಯತ್ ಗಳಿಂದ ಮಾತ್ರ ಸಾಧ್ಯ ಆದ್ದರಿಂದ ಗ್ರಾಮ ಪಂಚಾಯತ್ ಗಳಿಗೆ ಹೆಚ್ಚಿನ ಶಕ್ತಿ ತುಂಬಬೇಕಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದರು.

ಅವರು ಇಂದು ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಗ್ರಾಮಗಳ ಅಭಿವೃದ್ಧಿ ಯಿಂದ ದೇಶದ ಅಭಿವೃದ್ಧಿ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು. ಗ್ರಾಮ ಪಂಚಾಯತ್ ಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಶಕ್ತಿ ತುಂಬಿದರೆ ಆ ಮೂಲಕ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ. ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಎಲ್ಲಾ ಶಾಸಕರೊಂದಿಗೆ ಚರ್ಚಿಸಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಪ್ರಸ್ತುತ ನಮ್ಮ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗ ಪಡಿಸಿಕೊಳ್ಳುವಂತೆ ಸಚಿವರು ತಿಳಿಸಿದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹೆಚ್., ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್, ತಹಶೀಲ್ದಾರ್ ಶೋಭಾಲಕ್ಷ್ಮಿ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಭಾರತಿ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ, ಇತ್ತೀಚೆಗೆ ಬೈಂದೂರು ನಲ್ಲಿ ನಡೆದ ಮೀನುಗಾರಿಕೆ ದುರಂತದಲ್ಲಿ ಮೃತಪಟ್ಟ ಸತೀಶ್ ಖಾರ್ವಿ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆ ವತಿಯಿಂದ ನೀಡುವ ಪರಿಹಾರದ ಚೆಕ ವಿತರಿಸಿದರು.

ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿದ್ಕಲ್ ಕಟ್ಟೆ ಕೆ.ಪಿ.ಎಸ್ ಶಾಲೆಯ ಶಿಕ್ಷಕ ಸತೀಶ್ ಶೆಟ್ಟಿಗಾರ್ ಸ್ವಾಗತಿಸಿದರು.

Comments are closed.