ಕರಾವಳಿ

ಮರಕ್ಕೆ ಢಿಕ್ಕಿಯಾಗಿ ಚರಂಡಿಗೆ ಉರುಳಿದ ಇನ್ನೋವಾ ಕಾರು; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Pinterest LinkedIn Tumblr

ಕುಂದಾಪುರ: ತಾಲೂಕಿನ ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಚರಂಡಿಗೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ. 27ರಂದು ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಪರಿಣಾಮ ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯ (27), ಕೀರ್ತನಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಮಿಥುನ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಒಂದು ಭಾಗ ಸಂಪೂರ್ಣ ಜಖಂಗೊಂಡಿದ್ದು ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು.

ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್‌ ಪಿಎಂ ಹಾಗೂ ಕೋಟ ಪೊಲೀಸ್‌ ಠಾಣಾಧಿಕಾರಿ ತೇಜಸ್ವಿ, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.