ಕರ್ನಾಟಕ

ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ

Pinterest LinkedIn Tumblr

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್ (76) ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಏಪ್ರಿಲ್ 22ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ತೀವ್ರ ಹೃದಯಾಘಾತದಿಂದ ಶ್ರೀನಿವಾಸ್ ಪ್ರಸಾದ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸದ್ಯ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ರವಾನೆ ಮಾಡಲಾಗಿದೆ. ಅಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿದ್ದ ಅವರು,
ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತರಾಗಿದ್ದರು. ಚಾಮರಾಜನಗರ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಕಳೆದ ಮಾರ್ಚ್ 17 ರಂದು ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದರು. ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ವಿ. ಶ್ರೀನಿವಾಸ್ ಪ್ರಸಾದ್ ಅವರು 1974ರಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುವ ಮೂಲಕ ಅನಿರೀಕ್ಷಿತವಾಗಿ ರಾಜಕೀಯ ಪ್ರವೇಶ ಮಾಡಿದ್ದರು. 1978ರ ಸಾರ್ವತ್ರಿಕ ಚುನಾವಣೆಗೆ ತಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 1980ರಲ್ಲಿ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ 33ರ ವಯಸ್ಸಿನಲ್ಲಿ ಸಂಸತ್ ಪ್ರವೇಶ ಮಾಡಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ

ಸಿಎಂ ಸಂತಾಪ: ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ‘ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.
ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.
ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದಿದ್ದಾರೆ.

 

Comments are closed.