ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು.ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆಯಿತ್ತು ಎನ್ನಲಾಗಿದೆ.
ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಸರಿಗಮ ವಿಜಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜನವರಿ 16 ಬೆಳಿಗ್ಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.
ವಿಜಿ ಅವರದ್ದು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರಗಳಲ್ಲಿಯೂ ನಟಿಸಿದ್ದಾರೆ.
ಆರಂಭದಲ್ಲಿ ಕೆಲ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ವಿಜಿ ಅವರು ‘ಬೆಳುವಲದ ಮಡಿಲಲ್ಲಿ’ ಸಿನಿಮಾ ಮೂಲಕ ನಟರಾಗಿ ಎಂಟ್ರಿ ಕೊಟ್ಟರು. 2018ರ ಹೊತ್ತಿಗೆ ವಿಜಯ್ ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳ ನಿರ್ದೇಶನವನ್ನೂ ಮಾಡಿದ್ದರು.
Comments are closed.