ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪರಿಸ್ಥತಿ ಸೂಕ್ಷ್ಮವಾಗಿರುವುದರಿಂದ ದಕ್ಷಿಣ ಕನ್ನಡ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಅವರು ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸುಹಾಸ್ ಹತ್ಯೆ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ನಾವು ಭದ್ರತೆಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಿದ್ದೇವೆ. ಸುಹಾಸ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅಂತ್ಯಕ್ರಿಯೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ಗುರುತು ಸಿಕ್ಕಿದ್ದು ಅವರನ್ನು ವಶಕ್ಕೆ ಪಡೆಯಲು ನಮ್ಮ ಪೊಲೀಸ್ ತಂಡ ಕೆಲಸ ಮಾಡುತ್ತಿದೆ ಎಂದು ಹಿತೇಂದ್ರ ಹೇಳಿದರು.
ಮಂಗಳೂರಿನಲ್ಲಿ ನಿಷೇಧಾಜ್ಞೆ: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಬಿಎನ್ಎಸ್ ಕಲಂ 163 ಅಡಿಯಲ್ಲಿ ಮೇ 2 ರ ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Comments are closed.