ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು(ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಗೀತಾ ಜಯಂತಿಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ ‘ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವ’ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸುವ ಬಗ್ಗೆ ಪ್ರಧಾನಿ ಕಚೇರಿ ದೃಢಪಡಿಸಿದ್ದು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಠದ ಮೂಲಗಳು ತಿಳಿಸಿವೆ.
ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ತೃತೀಯ ಪರ್ಯಾಯ ಸಂದರ್ಭಗುಜರಾತ್ ಮುಖ್ಯಮಂತ್ರಿಯಾಗಿ ಉಡುಪಿಗೆ ಆಗಮಿಸಿದ್ದ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿ ಶ್ರೀಕೃಷ್ಣನೂರು ಉಡುಪಿಗೆ ಭೇಟಿ ನೀಡಲಿದ್ದಾರೆ.
ವಿಶ್ವ ಗೀತಾ ಪರ್ಯಾಯ ಅಂಗವಾಗಿ ಮಹತ್ವಾಕಾಂಕ್ಷೆಯ ಕೋಟಿ ಗೀತಾ ಲೇಖನ ಯಜ್ಞ ಯೋಜನೆ ಜತೆಗೆ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯವನ್ನು ಪ್ರಶಂಸಿಸಿ ಪ್ರಧಾನಿ ಮೋದಿ ಅಭಿನಂದನಾ ಪತ್ರ ಕಳಿಸಿದ್ದರು.

Comments are closed.