ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಓರ್ವ ಯುವಕನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಸಾಸ್ತಾನದಲ್ಲಿ ಈ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಬ್ರಹ್ಮಾವರ ತಾಲೂಕಿನ ಹಂಗಾರಕಟ್ಟೆ ಬಾಳ್ಕುದ್ರು ಗ್ರಾಮದ ನಿವಾಸಿ ಮನಿತ್(26) ಎಂದು ಗುರುತಿಸಲಾಗಿದೆ. ಫೆ.9ರಂದು ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಸಿಬ್ಬಂದಿ ಜೊತೆಗೆ ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಸಾರ್ವಜನಿಕರು ಸ್ಥಳದಿಂದ ಓಡಿ ಹೋಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಮನಿತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತನನಿಂದ ಕ್ರಿಕೆಟ್ ಬೆಟ್ಟಿಂಗ್ ಗೆ ಬಳಸುತ್ತಿದ್ದ ಐಫೋನ್ ಮೊಬೈಲ್ ಹಾಗೂ ಬೆಟ್ಟಿಂಗ್ ಹಣ 800 ರೂ. ವಶಪಡಿಸಿಕೊಳ್ಳಲಾಗಿದೆ. ಆರೋಪಿತನು ಒಮಾನ್ -ಝಿಂಬಾಳ್ವೆ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಮೊಬೈಲ್ ನಲ್ಲಿರುವ ಆನ್ ಲೈನ್ ಅಪ್ಲಿಕೇಶನ್ ಮೂಲಕ ಸಂಘಟಿತವಾಗಿ ಇತರರೊಂದಿಗೆ ಸೇರಿಕೊಂಡು ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿದ್ದುದಾಗಿ ತನಿಖೆಯಿಂದ ತಿಳಿದುಬಂದಿದೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Comments are closed.